ರಾಯಚೂರು: ಬೆಳೆ ನಷ್ಟ ಪರಿಹಾರ, ಉದ್ಯೋಗ ಖಾತ್ರಿ ಯೋಜನೆಯ ಸಮರ್ಪಕ ಅನುಷ್ಠಾನ, ಭೂಮಿ, ಮನೆ, ನಿವೇಶನ, ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆಗಳ ಪರಿಹಾರ ಸೇರಿದಂತೆ ರೈತರು, ಕೃಷಿ ಕೂಲಿಕಾರರು ಮತ್ತು ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 24ರಿಂದ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಕರಿಯಪ್ಪ ಅಚ್ಚೊಳ್ಳಿ ತಿಳಿಸಿದರು.

ಜಿಲ್ಲೆಯಲ್ಲಿ ತುಂಗಭದ್ರಾ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳಿದ್ದರೂ ಸಮರ್ಪಕ ಮಳೆಯಾಗದ ಕಾರಣ ಬಹುತೇಕ ಪ್ರದೇಶಗಳು ಬರದ ಸಂಕಷ್ಟ ಎದುರಿಸುತ್ತಿವೆ. ಮಳೆ ಕೊರತೆಯಿಂದ ಬೆಳೆಗಳು ಹಾನಿಗೀಡಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಕೂಲಿಕಾರರಿಗೆ ಕೆಲಸವಿಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿದೆ. ಕೃಷಿಗಾಗಿ ಸಾಲ ಮಾಡಿದ ರೈತರು ಅದನ್ನು ತೀರಿಸಲಾಗದೆ ಪರದಾಡುತ್ತಿದ್ದಾರೆ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ ಖಾತ್ರಿ ಯೋಜನೆಯಲ್ಲಿನ ತಾಂತ್ರಿಕ ತೊಂದರೆಗಳು, ಬಾಕಿ ಕೂಲಿ ಪಾವತಿ ಹಾಗೂ ಮನೆ ಮತ್ತು ನಿವೇಶನಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಜನರನ್ನು ಕಾಡುತ್ತಿವೆ. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ರೈತರು, ಕೃಷಿ ಕೂಲಿಕಾರರು ಮತ್ತು ಗ್ರಾಮೀಣ ಕಾರ್ಮಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದರು.

ಈ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರಗಳ ಗಮನ ಸೆಳೆಯುವ ಉದ್ದೇಶದಿಂದ ಸಂಘಟನೆಗಳು ಜಂಟಿಯಾಗಿ ಹೋರಾಟ ರೂಪಿಸಿವೆ. ದೇವದುರ್ಗ, ಅರಕೇರಾ, ಲಿಂಗಸುಗೂರು, ಮಸ್ಕಿ ಹಾಗೂ ಸಿಂಧನೂರು ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಅಕ್ಟೋಬರ್ 24ರಿಂದ ಪಾದಯಾತ್ರೆಗಳು ಆರಂಭವಾಗಲಿದ್ದು, ಅಕ್ಟೋಬರ್ 27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಸವಂತರಾಯಗೌಡ, ನರಸಪ್ಪ ನಾಯಕ ಹಾಗೂ ಹನುಮಂತ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor