ರಾಯಚೂರು: ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹಾಗೂ ಶೂನ್ಯ ಶಿಕ್ಷಕರ ಸಮಸ್ಯೆ ಕುರಿತು ಮನವಿ ಸಲ್ಲಿಸಲು ಬಂದ ದೂರುದಾರರೊಂದಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗರಂ ಆಗಿದ್ದಾರೆ ಎನ್ನಲಾದ ಘಟನೆ ರಾಯಚೂರಿನಲ್ಲಿ ನಡೆದಿದೆ.

ನಗರದ ಕೃಷಿ ವಿಶ್ವವಿದ್ಯಾಲಯದ ಆಡಿಟೋರಿಯಂ ಹಾಲ್‌ನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಆಯೋಜಿಸಿದ್ದ ಕಾರ್ಯಾಗಾರದ ಬಳಿಕ ಈ ಘಟನೆ ನಡೆದಿದೆ.

ಕಾರ್ಯಾಗಾರ ಮುಗಿಸಿ ಹೊರಬರುತ್ತಿದ್ದ ಸಚಿವರಿಗೆ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಹಲವು ಶಾಲೆಗಳಲ್ಲಿ ಶೂನ್ಯ ಶಿಕ್ಷಕರ ಸಮಸ್ಯೆ ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿನ ವಿವಿಧ ಸಮಸ್ಯೆಗಳ ಕುರಿತು ದೂರುದಾರರು ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ ದೂರು ಆಲಿಸುವ ಬದಲು ಸಚಿವರು ತಾಳ್ಮೆ ಕಳೆದುಕೊಂಡು ದೂರುದಾರರೊಂದಿಗೆ ಗರಂ ಆಗಿದ್ದಾರೆ ಎನ್ನಲಾಗಿದೆ.

‘ಹಿಂದಿನ ಸರ್ಕಾರದಲ್ಲಿ ಏನಾಗಿದೆ ಗೊತ್ತಾ? ಮನವಿ ಕೊಡು, ಭಾಷಣ ಮಾಡಬೇಡ’ ಎಂದು ಸಚಿವರು ದೂರುದಾರರಿಗೆ ಹೇಳಿದ್ದಾರೆ ಎನ್ನಲಾಗಿದೆ.

ಶಿಕ್ಷಕರ ಕೊರತೆಯಿಂದ ಸರ್ಕಾರಿ ಶಾಲೆಗಳ ಶಿಕ್ಷಣ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿರುವ ಸಂದರ್ಭದಲ್ಲಿ, ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಲು ಬಂದವರೊಂದಿಗೆ ಸಚಿವರು ನಡೆದುಕೊಂಡ ರೀತಿ ಸ್ಥಳದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಘಟನೆಯ ಬಳಿಕ ಸಚಿವರು ತರಾತುರಿಯಲ್ಲಿ ಕಾರ್ಯಕ್ರಮದ ಸ್ಥಳದಿಂದ ನಿರ್ಗಮಿಸಿದ್ದಾರೆ. ಶೂನ್ಯ ಶಿಕ್ಷಕರ ಶಾಲೆಗಳ ಸಮಸ್ಯೆಗೆ ಪರಿಹಾರ ಕೋರಿ ಮನವಿ ಸಲ್ಲಿಸಲು ಬಂದವರ ಅಹವಾಲು ಆಲಿಸಲು ಸಚಿವರಿಗೆ ಸಮಯವಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಬಾವಸಲಿ ರಾಯಚೂರು/ವಾರ್ತಾಭಾರತಿ

ರಾಯಚೂರು ಜಿಲ್ಲಾ ವರದಿಗಾರರು

ಬವಸಾಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ