Raichur | ಪ.ಜಾ., ಪ.ಪಂ. ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ: ಡಿಸಿ ಪೂವಿತಾ ಎಸ್.
ರಾಯಚೂರು : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾಗೃತ ಹಾಗೂ ಉಸ್ತುವಾರಿ (ದೌರ್ಜನ್ಯ ನಿಯಂತ್ರಣ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ಇಲಾಖೆಗಳು ಹಾಗೂ ಅಭಿವೃದ್ಧಿ ನಿಗಮಗಳಿಂದ ದೊರೆಯುವ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ತಮಗೆ ನಿಗದಿಪಡಿಸಿರುವ ಗುರಿಯನ್ನು ನಿಗದಿತ ಅವಧಿಯೊಳಗೆ ತಲುಪಬೇಕು. ಸಮಿತಿಯು ಶಿಫಾರಸು ಮಾಡಿದ ಪಟ್ಟಿಯನ್ನು ಅಂತಿಮಗೊಳಿಸಬೇಕು. ಅಲ್ಲದೆ, ಎಸ್ಸಿಪಿ/ಟಿಎಸ್ಪಿ ಯೋಜನೆಗಳಡಿ ದೊರೆಯುವ ವಸತಿ, ಶಿಕ್ಷಣ ಹಾಗೂ ವೈದ್ಯಕೀಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತೆ ನೋಡಿಕೊಳ್ಳಬೇಕು. ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರಧನ ವಿತರಣೆಯಲ್ಲಿ ವಿನಾಕಾರಣ ವಿಳಂಬ ಮಾಡಬಾರದು. ಪರಿಶಿಷ್ಟ ಸಮುದಾಯದ ಕಾಲೋನಿಗಳಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸಿ, ಅರ್ಹರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದರು.
ಫಲಾನುಭವಿಗಳಿಗೆ ಅಗತ್ಯವಿರುವಷ್ಟು ಅನುದಾನ ಬಿಡುಗಡೆಯಾಗದ ಕಾರಣ ಸಲ್ಲಿಕೆಯಾಗಿರುವ ಎಲ್ಲ ಪ್ರಸ್ತಾವನೆಗಳಿಗೆ ಸೌಲಭ್ಯ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಎಲ್ಲ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಕೆಲವು ಗ್ರಾಮಗಳಲ್ಲಿ ಎಲ್ಲ ಸಮುದಾಯಗಳ ಮುಖಂಡರೊಂದಿಗೆ ನಿಯಮಿತವಾಗಿ ಸಭೆ ನಡೆಸಬೇಕು. ಈ ಕುರಿತು ಆಯಾ ಗ್ರಾಮಗಳ ಎಲ್ಲ ಸಮುದಾಯದ ಜನರಿಗೆ ಡಂಗೂರ ಸಾರುವ ಮೂಲಕ ಮಾಹಿತಿ ನೀಡಿ, ಎಲ್ಲರನ್ನೂ ಒಗ್ಗೂಡಿಸಿ ಸಭೆ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ ಮಾತನಾಡಿ, ಪ್ರತಿ ಬುಧವಾರ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಶಾಂತಿ ಪಾಲನಾ ಸಭೆಗಳನ್ನು ನಡೆಸುವ ಮೂಲಕ ಸಮುದಾಯಗಳ ನಡುವೆ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುವ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಜನರಿಗೆ ಮಾಹಿತಿ ನೀಡುತ್ತಿದ್ದಾರೆ. ಅಲ್ಲದೆ, ಪ್ರತಿ ಭಾನುವಾರ ಪೊಲೀಸ್ ಠಾಣೆಗಳಲ್ಲಿಯೂ ಸಭೆಗಳನ್ನು ನಡೆಸಲಾಗುತ್ತಿದೆ. ಒಂದು ವೇಳೆ ಸಭೆ ನಡೆಸದ ಪೊಲೀಸ್ ಠಾಣೆಗಳಿದ್ದರೆ, ಅವುಗಳ ಮಾಹಿತಿಯನ್ನು ತಮಗೆ ನೀಡಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರಾ ಅವರು ಹಿಂದಿನ ಸಭೆಯ ನಡಾವಳಿಗಳನ್ನು ಓದಿದರು.
ಸಭೆಯಲ್ಲಿ ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಹರೀಶ್, ಸಮಿತಿ ಸದಸ್ಯರಾದ ರವೀಂದ್ರ ಜಲ್ದಾರ್, ಕೆ.ಇ. ಕುಮಾರ್, ಹೇಮರಾಜ್ ಅಸ್ಕಿಹಾಳ್, ಎನ್. ರಘುವೀರ್ ನಾಯಕ, ಡಾ. ರವಿಕುಮಾರ್ ಅಸ್ಕಿಹಾಳ್, ಪವನ್ ಕಿಶೋರ್ ಪಾಟೀಲ್, ಬಸವರಾಜ ನಕ್ಕುಂದಿ, ಟಿ. ಸುಧಾಮ, ರಿಮ್ಸ್ ಸಂಸ್ಥೆಯ ನಿರ್ದೇಶಕ ಡಾ. ಬಿ.ಕೆ. ರಮೇಶ, ಆಹಾರ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹ್ಮದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ನಿಗಮಗಳ ಜಿಲ್ಲಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.