ರಾಯಚೂರು: ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಬಿ. ಜಕಾತಿ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೈಹಿಕ ಸಾಮರ್ಥ್ಯ ಉತ್ತಮವಾಗಿದ್ದಾಗ ಮಾತ್ರ ಯಾವುದೇ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಹೀಗಾಗಿ ಒತ್ತಡದ ಕೆಲಸದ ನಡುವೆಯೂ ಆರೋಗ್ಯದ ಕಡೆಗೆ ಗಮನಹರಿಸುವುದು ಅತ್ಯಂತ ಮುಖ್ಯವಾಗಿದೆ ಎಂದರು.

ಸಾರ್ವಜನಿಕರು ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟಿದ್ದಾರೆ. ಆ ವಿಶ್ವಾಸವನ್ನು ಉಳಿಸಿಕೊಂಡು ಹೋಗಬೇಕಿದೆ. ನ್ಯಾಯಾಂಗ ಇಲಾಖೆಯ ಸಿಬ್ಬಂದಿಯೂ ಸಾರ್ವಜನಿಕರಿಗೆ ನ್ಯಾಯ ಒದಗಿಸುವ ಕಾರ್ಯದಲ್ಲಿ ನಿರಂತರ ಒತ್ತಡದ ನಡುವೆ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ವ್ಯಾಯಾಮ ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದನ್ನು ಮರೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನ್ಯಾಯಾಂಗ ಇಲಾಖೆಯ ಸಿಬ್ಬಂದಿಯೂ ವ್ಯಾಯಾಮ ಹಾಗೂ ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಲು ಇಲಾಖೆಯ ವತಿಯಿಂದ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಲಾಂಗ್ ಜಂಪ್, ಶಾಟ್‌ಪುಟ್, ಓಟ ಹಾಗೂ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಮಾಧ್ಯಮ ತಂಡಗಳ ನಡುವೆ ನಡೆದ ಕ್ರಿಕೆಟ್ ಪಂದ್ಯದಲ್ಲಿ ಮಾಧ್ಯಮ ತಂಡ ಜಯಭೇರಿ ಬಾರಿಸಿತು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಾಂತವೀರ, ಸಿಂಧನೂರು ಉಪವಿಭಾಗದ ಡಿವೈಎಸ್‌ಪಿ ಚಂದ್ರಶೇಖರ ಸೇರಿದಂತೆ ವಿವಿಧ ಠಾಣೆಗಳ ಪಿಎಸ್‌ಐಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಬಾವಸಲಿ ರಾಯಚೂರು/ವಾರ್ತಾಭಾರತಿ

ರಾಯಚೂರು ಜಿಲ್ಲಾ ವರದಿಗಾರರು

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ