×
Ad

ರಾಯಚೂರು| ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ

Update: 2025-12-04 19:52 IST

ರಾಯಚೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಇದೇ ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 5 ವರ್ಷದೊಳಗಿನ 2,55,257 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ, ಗುರಿ ತಲುಪಲು ಅಗತ್ಯ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ನಿತೀಶ್ ಕೆ. ಮಾತನಾಡಿದರು.

ಗ್ರಾಮೀಣ ಮತ್ತು ನಗರ ಪ್ರದೇಶದ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿನ 0-5 ವರ್ಷದೊಳಗಿನ ಯಾವುದೇ ಮಗು ಲಸಿಕೆ ಸೌಲಭ್ಯದಿಂದ ಹೊರಗುಳಿಯಬಾರದು. ವಿವಿಧ ರಾಜ್ಯಗಳಿಂದ ಉದ್ಯೋಗ ಹರಸಿ ಬಂದಂತಹ ಕಾರ್ಮಿಕ ಕುಟುಂಬಗಳ ಮಕ್ಕಳನ್ನೂ ಗುರುತಿಸಿ ಲಸಿಕೆ ಹಾಕಬೇಕು ಎಂದು ತಿಳಿಸಿದರು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ವಾಹನಗಳನ್ನು ನಿಗದಿತ ಸಮಯಕ್ಕೆ ನಿಯೋಜಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.

ಈ ಕಾರ್ಯಕ್ರಮ ವ್ಯಾಪಕ ಪ್ರಚಾರಕ್ಕಾಗಿ ಶಾಲಾ ಮಕ್ಕಳಿಂದ ಜಾಥಾ ಏರ್ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕುರಿತು ಜಾಗೃತಿ ಮೂಡಿಸಬೇಕು. ಸ್ಥಳೀಯ ಸಂಸ್ಥೆಗಳ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಆಡಿಯೋ ಮೂಲಕ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚಾರಪಡಿಸಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತಾಯಂದಿರ ಸಭೆಗಳಲ್ಲಿ ಲಸಿಕಾ ದಿನಾಂಕಗಳ ಕುರಿತು, ಪಲ್ಸ್ ಪೋಲಿಯೋ ಕಾರ್ಯಕ್ರಮದ ಮಹತ್ವದ ಕುರಿತು ತಿಳಿಸಬೇಕು. ಲಸಿಕಾ ದಿನ ಅಂಗನವಾಡಿ ಕೇಂದ್ರವನ್ನು ತೆರೆದಿಡಲು ಸೂಚಿಸಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಜಿಲ್ಲೆಯ ಎಲ್ಲ ಸಿಡಿಪಿಓಗಳು ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸದಸ್ಯರಾಗಿದ್ದು, ಕಾರ್ಯಕ್ರಮ ಸಮರ್ಪಕ ಅನುಷ್ಠಾನದ ಮೇಲ್ವಚಾರಣೆ ವಹಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಮಾತನಾಡಿ, ಜಿಲ್ಲೆಯಲ್ಲಿನ ಯಾವುದೇ ಒಬ್ಬ ಮಗು ಕೂಡ ಲಸಿಕೆಯಿಂದ ಹೊರಗುಳಿಯಬಾರದು. ವಿಶೇಷವಾಗಿ ಗ್ರಾಮೀಣ ಮತ್ತು ಹೊಲಗಳಲ್ಲಿ ವಾಸಿಸುತ್ತಿರುವ ಮಕ್ಕಳನ್ನು ಗಮನಹರಿಸಿ ಅವರಿಗೂ ಕೂಡ ಪಲ್ಸ್ ಪೋಲಿಯೋ ಲಸಿಕೆ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕೂಲಿ ಕೆಲಸಕ್ಕೆ ತೆರಳುವ ಕಾರ್ಮಿಕರು ತಮ್ಮ ಮಕ್ಕಳನ್ನು ಕೆಲಸದ ಸ್ಥಳಗಳಲ್ಲಿ ಕಾಣ ಸಿಗುತ್ತಾರೆ. ಅವರನ್ನು ಗುರುತಿಸಿ ಪ್ರತಿಯೊಂದು ಮಗುವಿಗೂ ಲಸಿಕೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ವಿಜಯಶಂಕರ್, ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ನಂದಿತಾ ಎಮ್.ಎನ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್, ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಆರತಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಮಾನಪ್ಪ, ಡಬ್ಲ್ಯುಹೆಚ್‌ಓ ಡಾ.ಅನೀಲ್ ತಾಳಿಕೊಟೆ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಗಣೇಶ್, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಕುಮಾರ್, ಟಿಬಿ ಅಧಿಕಾರಿ ಡಾ.ಎಂ.ಡಿ.ಸಾಜೀದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ್‌, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News