Raichur | ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಿ: ಸಿಇಒ ಈಶ್ವರ್ ಕಾಂದೂ

Update: 2026-08-04 20:00 IST

ರಾಯಚೂರು : ತಾಲೂಕಿನ ಇಡಪನೂರು, ಗಾಣದಾಳ ಹಾಗೂ ಎನ್. ಮಲ್ಕಾಪುರ ಗ್ರಾಮ ಪಂಚಾಯಿತಿಗಳಲ್ಲಿ ವಿಬಿಜಿಆರ್ವೈ ಹಾಗೂ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಮಂಗಳವಾರ ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇಡಪನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅಡುಗೆ ಕೋಣೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಅಡುಗೆ ತಯಾರಿಸುವ ಸ್ಥಳ, ಪಾತ್ರೆಗಳು ಹಾಗೂ ದಾಸ್ತಾನು ಕೊಠಡಿಯನ್ನು ಪ್ರತಿದಿನ ಸ್ವಚ್ಛವಾಗಿಟ್ಟುಕೊಳ್ಳಬೇಕು. ಅಡುಗೆ ಸಿಬ್ಬಂದಿ ವೈಯಕ್ತಿಕ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.

ವಿದ್ಯಾರ್ಥಿ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಡಿಸೆಂಬರ್‌ನಲ್ಲಿ ಆಯೋಜಿಸುವುದಾಗಿ ಭರವಸೆ ನೀಡಿದರು.

ಬಳಿಕ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದ ಅವರು, ವಿಬಿಜಿಆರ್ವೈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಕೂಲಿಕಾರರ ಹಾಜರಾತಿಯನ್ನು ಕಡ್ಡಾಯವಾಗಿ ಎನ್‌ಎಂಎಂಎಸ್ (NMMS) ಮೂಲಕ ದಾಖಲಿಸಬೇಕು ಹಾಗೂ ಕಾಮಗಾರಿಯ ಮೂರು ಹಂತಗಳ ಛಾಯಾಚಿತ್ರಗಳನ್ನು ನಿರ್ವಹಿಸಬೇಕು ಎಂದು ಸೂಚಿಸಿದರು. ಪಿಡಿಒ, ತಾಂತ್ರಿಕ ಸಹಾಯಕರು ಹಾಗೂ ಬಿಎಫ್‌ಟಿ ಸಿಬ್ಬಂದಿ ನಿಯಮಿತವಾಗಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿದರು.

ಎನ್. ಮಲ್ಕಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡ್ರವೇಲಿ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಸಿಸಿ ರಸ್ತೆ ಕಾಮಗಾರಿಯನ್ನು ವೀಕ್ಷಿಸಿ, ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸಿರುವ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದರು.

ನಂತರ ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ವಿಜ್ಞಾನ ಪ್ರಯೋಗಾಲಯವನ್ನು ವೀಕ್ಷಿಸಿದ ಅವರು, ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಆಲಿಸಿ, ಭೋಜನಾಲಯದಲ್ಲಿ ಶುಚಿತ್ವ ಕಾಪಾಡಿಕೊಂಡು ಗುಣಮಟ್ಟದ ಆಹಾರ ಒದಗಿಸುವಂತೆ ಸೂಚಿಸಿದರು.

ಗಾಣದಾಳ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಇಒ, ಗುರಿಗೆ ಅನುಗುಣವಾಗಿ ತೆರಿಗೆ ವಸೂಲಿ ಮಾಡುವುದರ ಜೊತೆಗೆ ಜಲ ಜೀವನ್ ಮಿಷನ್ ಹಾಗೂ ವಿಬಿಜಿಆರ್ವೈ ಯೋಜನೆಗಳಡಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವಂತೆ ಸೂಚಿಸಿದರು. ಸಿಬ್ಬಂದಿಯ ಸಮಸ್ಯೆಗಳು ಹಾಗೂ ಅಗತ್ಯತೆಗಳ ಕುರಿತು ಮಾಹಿತಿ ಪಡೆದು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಚಂದ್ರಶೇಖರ ಪವಾರ್, ಸಹಾಯಕ ನಿರ್ದೇಶಕ ಶ್ರೀ ಹನುಮಂತ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಈರಣ್ಣ ಕೋಸಗಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಮನ್ಸೂರ್ ಖಾನ್, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀ ಅಲ್ತಾಫ್, ಕಿರಿಯ ಅಭಿಯಂತರ ಶ್ರೀ ಮಹೇಶ್, ಪಿಡಿಒಗಳು, ಟಿಎಂಎಸ್, ಟಿಸಿ, ಡಿಐಇಸಿ, ತಾಂತ್ರಿಕ ಸಹಾಯಕರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News