×
Ad

ರಾಯಚೂರು: ಸಾಹಿತಿ ಪ್ರೊ. ಶಾಶ್ವತಯ್ಯಸ್ವಾಮಿ ಮುಕ್ಕುಂದಿಮಠ ನಿಧನ

Update: 2025-10-31 11:38 IST

ಸಿಂಧನೂರು: ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಸಾಹಿತಿ, ಸಂಶೋಧಕ ಪ್ರೊ.ಶಾಶ್ವತಯ್ಯಸ್ವಾಮಿ ಮುಕ್ಕುಂದಿಮಠ (85) ಅವರು ಗುರುವಾರ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತಿದ್ದ ಅವರನ್ನು ಚಿಕಿತ್ಸೆಗಾಗಿ ಕಳೆದವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಉಪ್ಪಾರ ಓಣಿಯಲ್ಲಿರುವ ಖಂಡಿಮಠ ಚೌಕಿಯಲ್ಲಿ ನೆರವೇರಿತು.

ಪ್ರೊ.ಶಾಶ್ವತಯ್ಯಸ್ವಾಮಿ ಅವರು ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸುಮಾರು 24 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರು 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, ಅನೇಕ ಸಂಶೋಧನಾ ಕೃತಿ ಹಾಗೂ ಪ್ರಬಂಧಗಳನ್ನು ಮಂಡಿಸಿದ್ದಾರೆ.

ಸಿಂಧನೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಪ್ರಥಮ ಅಧ್ಯಕ್ಷ, 2004ರಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷರಾಗಿ, 2019ರಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಹಂಪಿ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸದಸ್ಯರಾಗಿ, ಕಲಬುರ್ಗಿ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಇವರ ಸಾಹಿತ್ಯ ಸೇವೆಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ವಿವಿಧ ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿವೆ.

ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News