Raichur | ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಪಾಮಯ್ಯ
ರಾಯಚೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ಸೌಲಭ್ಯ ತಲುಪಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ಗಂಭೀರವಾಗಿ ನಿರ್ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಜಲ ನಿರ್ಮಲ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಜಮೆಯಾಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಮೃತಪಟ್ಟ ಫಲಾನುಭವಿಗಳ ಹೆಸರನ್ನು ತೆಗೆಯುವ ಮುನ್ನ ನಾಡ ಕಚೇರಿ ನೀಡುವ ಮರಣ ಪ್ರಮಾಣಪತ್ರ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಬೇಕು. ಸಭೆಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಗೃಹಜ್ಯೋತಿ ಯೋಜನೆಯಲ್ಲಿ ಆಗಿರುವ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಬೇಕು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಕುರಿತು ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾಹಿತಿ ಫಲಕಗಳನ್ನು ಅಳವಡಿಸುವಂತೆ ಸೂಚಿಸಿದರು.
ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್ ಮಾತನಾಡಿ, ಬದುಕಿರುವ ಕೆಲ ಮಹಿಳೆಯರನ್ನು ಮೃತಪಟ್ಟಿದ್ದಾರೆ ಎಂದು ದಾಖಲಿಸಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಸಮರ್ಪಕ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು. ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಸಹಾಯವಾಣಿ ಆರಂಭಿಸಿ, ಗ್ರಾಮೀಣ ಭಾಗಗಳಲ್ಲಿ ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 5.13 ಲಕ್ಷಕ್ಕೂ ಅಧಿಕ ಪಡಿತರ ಚೀಟಿಗಳಿಗೆ ಆಹಾರಧಾನ್ಯ ವಿತರಣೆ ನಡೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 4.60 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಸಹಾಯಧನ ವರ್ಗಾವಣೆಯಾಗಿದ್ದು, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳೂ ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಜಾರಿಯಲ್ಲಿವೆ ಎಂದು ತಿಳಿಸಲಾಯಿತು.
ಸಭೆ ಆರಂಭಕ್ಕೂ ಮುನ್ನ ಇತ್ತೀಚೆಗೆ ನಿಧನರಾದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸೂರಜ್ ಹೆಗಡೆ ಹಾಗೂ ಮಾಜಿ ಶಾಸಕ ಸೈಯದ್ ಯಾಸಿನ್ ಅವರಿಗೆ ಒಂದು ನಿಮಿಷ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋನಿ,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಮಟ್ಟದ ಉಪಾಧ್ಯಕ್ಷರಾದ ನಾಗೇಂದ್ರ ಮಟಮಾರಿ, ಗಫೂರ್ ಸಾಬ್, ಹನುಮಂತಪ್ಪ ಜಾಲಿಬೆಂಚಿ, ಶೇಖರ ಗೌಡ ತುರ್ವಿಹಾಳ, ಸದಸ್ಯರಾದ ಬಿ,ಕೆ.ಅಮರೇಶ, ಲಕ್ಷ್ಮಣ ಜ್ಯೋತಿ, ಮಹೆಬೂಬ್ ಸಾಬ್, ಅನಿಲ ಕುಮಾರ್, ವೆಂಕಟೇಶ, ಆದನಗೌಡ, ಜಾಫರ್ ಪಟೇಲ್, ವೆಂಕಟರಾವ್, ಹೆಚ್.ಬಸವರಾಜ ಗೋನವಾರ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಭಾರಿ ಉಪ ನಿರ್ದೇಶಕರಾದ ನಜೀರ್ ಅಹಮದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶರಣಮ್ಮ, ಜೆಸ್ಕಾಂ ಇಲಾಖೆಯ ಮೋಹನ್, ಜಿಲ್ಲಾ ಉದ್ಯೋಗಾಧಿಕಾರಿಗಳಾದ ನವೀನಕುಮಾರ್ ಸಂಗೇಪಾಗ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವವರು ಸಭೆಯಲ್ಲಿ ಇದ್ದರು.