Raichur | ಎಸ್‌ಐಆರ್ ರದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ರಾಯಚೂರು: ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಹೋರಾಟಗಾರ ಶರಣಕುಮಾರ ಮಾತನಾಡಿ, ಚುನಾವಣಾ ಆಯೋಗವು ಕೇಂದ್ರದ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ದೂರಿದರು.
ಚುನಾವಣಾ ಆಯುಕ್ತರಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪಗಳಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಜ್ಞಾನೇಶ್ ಕುಮಾರ್ ಅವರನ್ನು ಆಯುಕ್ತ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಆರೋಪಗಳು ಗಂಭೀರವಾಗಿವೆ. ಕೂಡಲೇ ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಒಂದು ಧರ್ಮದ ಜನರನ್ನು ಗುರಿಯಾಗಿಸಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂಬ ಆರೋಪಗಳು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಹೇಳಿದರು.
ಜನರ ಸಂವಿಧಾನಬದ್ಧ ಮತದಾನದ ಹಕ್ಕನ್ನು ರಕ್ಷಿಸಲು ಇಂತಹ ರಾಜಕೀಯ ಷಡ್ಯಂತ್ರಗಳ ವಿರುದ್ಧ ಜನತೆ ಸಂಘಟಿತ ಹೋರಾಟ ನಡೆಸಬೇಕು ಎಂದು ಶರಣಕುಮಾರ ಕರೆ ನೀಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಜಾನ್ ವೆಸ್ಲಿ, ಮಾರೆಪ್ಪ ಹರವಿ, ಮಾರೆಮ್ಮ, ಆಂಜಿನೇಯ ಕುರುಬದೊಡ್ಡಿ, ಖಲೀಲ್ ಪಾಷಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.