ರಾಯಚೂರು | ಹೆಚ್‌ಐವಿ ಸೋಂಕಿತರಿಗೆ ಅಗತ್ಯ ಸೌಕರ್ಯ ಕಲ್ಪಿಸಿ: ಜಿಪಂ ಸಿಇಓ ಸೂಚನೆ
ಅಂತರ ಇಲಾಖೆ ಸಮನ್ವಯ ಸಮಿತಿ ಸಭೆ
ರಾಯಚೂರು: ಹೆಚ್‌ಐವಿ ರೋಗಿಗಳನ್ನು ಗುಣಪಡಿಸಲು ಸರ್ಕಾರವು ವಿವಿಧ ಚಿಕಿತ್ಸಾ ವ್ಯವಸ್ಥೆಗಳೊಂದಿಗೆ ಅನೇಕ ಯೋಜನೆಗಳನ್ನು ರೂಪಿಸಿ ಸೌಲಭ್ಯಗಳನ್ನು ಕಲ್ಪಿಸಿದೆ. ಸಾರ್ವಜನಿಕರು ಅವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಹೇಳಿದರು.
ಜ.21ರಂದು ನಗರದ ಜಿಲ್ಲಾ ಪಂಚಾಯತ್ ಸಿಇಓ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿ ನಡೆದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಕಸ್ಮಿಕ ಕಾರಣಗಳಿಂದ ಕೆಲವರು ಹೆಚ್‌ಐವಿ ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ. ಇಂತಹವರು ಸಮಾಜದಲ್ಲಿ ಕಳಂಕ ಮತ್ತು ತಾರತಮ್ಯಕ್ಕೆ ಒಳಗಾಗಬಾರದು. ಸೋಂಕಿತರ ನೆರವಿಗೆ ಎಲ್ಲ ಇಲಾಖೆಗಳು ಮುಂದಾಗಬೇಕು. ಹೆಚ್‌ಐವಿ ನಿರ್ಮೂಲನೆಯ ಜೊತೆಗೆ ಸೋಂಕಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಯುವ ಸಮುದಾಯಕ್ಕೆ ಹೆಚ್‌ಐವಿ ತಡೆ ಕುರಿತು ಜಾಗೃತಿ ಮೂಡಿಸಬೇಕು. ಸೋಂಕಿನಿಂದ ಉಂಟಾಗುವ ವೈಯಕ್ತಿಕ, ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳ ಬಗ್ಗೆ ಅರಿವು ನೀಡಬೇಕು. ಈಗಿರುವ ಸೋಂಕಿತರಿಗೆ ಎಆರ್‌ಟಿ ಚಿಕಿತ್ಸೆ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಅಗತ್ಯವಿರುವವರಿಗೆ ನೆವಿರಾಪಿನ್ ಚಿಕಿತ್ಸೆ ಒದಗಿಸಬೇಕು ಎಂದು ಸೂಚಿಸಿದರು.
ಲಿಂಗತ್ವ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತರ ಮಾಹಿತಿ ವೈದ್ಯಕೀಯ ಕಾರಣ ಹೊರತುಪಡಿಸಿ ಸಂಪೂರ್ಣ ಗೌಪ್ಯವಾಗಿರಬೇಕು. ಅವರಿಗೆ ವಸತಿ ಯೋಜನೆಯಡಿ ಮನೆ, ಸಾಲ ಸೌಲಭ್ಯ, ಮನಸ್ವಿನಿ ಮತ್ತು ಮೈತ್ರಿ ಯೋಜನೆಯಡಿ ಮಾಸಾಶನ, ಉದ್ಯೋಗಿನಿ ಯೋಜನೆಯಡಿ ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿರಳ ರಕ್ತದ ಗುಂಪು ಸಂಗ್ರಹಕ್ಕೆ ಸೂಚನೆ :
ಗರ್ಭಿಣಿ ಮತ್ತು ಬಾಣಂತಿಯರ ತುರ್ತು ಅವಶ್ಯಕತೆ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ರಕ್ತ ಬ್ಯಾಂಕ್‌ಗಳಲ್ಲಿ ನೆಗಟಿವ್ ಮತ್ತು ವಿರಳ ರಕ್ತ ಗುಂಪಿನ ಕನಿಷ್ಠ ಒಂದು ಯುನಿಟ್ ರಕ್ತವನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಜೊತೆಗೆ ಪದವಿ ಕಾಲೇಜುಗಳು, ಸಂಘ ಸಂಸ್ಥೆಗಳು, ಉತ್ಸವ ಮತ್ತು ಜಾತ್ರೆಗಳಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜಿಲ್ಲೆಯಲ್ಲಿ ರಕ್ತದ ಕೊರತೆ ಉಂಟಾಗದಂತೆ ನಿಗಾವಹಿಸಬೇಕು ಎಂದು ಸಿಇಓ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುರೇಂದ್ರ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವಿಜಯಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ. ಬಡಿಗೇರ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ನಂದಿತಾ ಎಂ.ಎನ್., ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ. ಮಹ್ಮದ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಣೇಶ್ ಕೆ., ಜಿಲ್ಲಾ ಕಾರಾಗೃಹ ಅಧೀಕ್ಷಕಿ ಅನೀತಾ ಎಸ್. ಹಿರೇಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್. ದಾಸಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.