ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿಮಹೋತ್ಸವ ಪ್ರಯುಕ್ತ ಪತ್ರಕರ್ತರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ
ರಾಯಚೂರು ಅ 3: ರಾಯಚೂರು ರಿಪೋರ್ಟರ್ಸ್ ಗಿಲ್ಡ್ ತನ್ನ ಬೆಳ್ಳಿ ಮಹೋತ್ಸವವನ್ನ ಕ್ರಿಯಾಶೀಲವಾಗಿ, ಜನಪರ, ಸಾಮಾಜಿಕ ಉತ್ಸವದ ರೀತಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಎನ್ ಎಸ್.ಬೋಸರಾಜು ಹೇಳಿದ್ದಾರೆ.
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್ ಮಾತನಾಡಿ, ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವದ ಅಂಗವಾಗಿ ಜಿಲ್ಲೆಯ ಪತ್ರಕರ್ತರಿಗೆ ವಿವಿಧ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇಂದು ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದ್ದು ಮುಂದಿನ ದಿನಗಳಲ್ಲಿ ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ, ಆರ್ ಎಪಿಎಂಸಿ ಅಧ್ಯಕ್ಷ ಜಯವಂತರಾವ್ ಪತಂಗೆ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ್, ಗಿಲ್ಡ್ ಪ್ರ.ಕಾರ್ಯದರ್ಶಿ ವೆಂಕಟೇಶ ಹೂಗಾರ, ಜಂಟಿ ಕಾರ್ಯದರ್ಶಿ ಶ್ರೀಕಾಂತ್ ಸಾವೂರು, ನಿಕಟ ಪೂರ್ವ ಅಧ್ಯಕ್ಷ ಚನ್ನಬಸವಣ್ಣ, ಸದಸ್ಯರಾದ ಚನ್ನಬಸವ ಬಾಗಲವಾಡ, ಖಾನ್ ಸಾಬ್ ಮೋಮಿನ್ ಸೇರಿದಂತೆ ವಿವಿಧ ತಾಲೂಕಿನ ಕ್ರಿಕೆಟ್ ತಂಡಗಳ ಕ್ರೀಡಾಪಟುಗಳು ಹಿರಿಯ ಕಿರಿಯ ಪತ್ರಕರ್ತರು ಉಪಸ್ಥಿತರಿದ್ದರು.