Raichur | ಎಲ್‌ವಿಡಿ ಮಹಾವಿದ್ಯಾಲಯದಲ್ಲಿ ‘ಸಂಗಮ–2026’: ಹಳೆಯ ವಿದ್ಯಾರ್ಥಿಗಳ ಅದ್ಧೂರಿ ಸ್ನೇಹ ಸಮ್ಮಿಲನ

ಸಂಸ್ಥೆಯ ಬೆಳವಣಿಗೆಯಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ಶಾಸಕ ಡಾ. ಶಿವರಾಜ ಪಾಟೀಲ

Update: 2026-07-19 22:06 IST

ರಾಯಚೂರು : ತಾರಾನಾಥ ಶಿಕ್ಷಣ ಸಂಸ್ಥೆಯ ಅಧೀನದಲ್ಲಿರುವ ಎಲ್.ವಿ.ಡಿ. ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸಮಾರಂಭ ಹಾಗೂ ‘ಸಂಗಮ–2026’ ಸ್ನೇಹ ಸಮ್ಮಿಲನ ಕಾರ್ಯಕ್ರಮ ಭಾನುವಾರ ಕಾಲೇಜಿನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಡಾ. ಶಿವರಾಜ ಪಾಟೀಲ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಹಳೆಯ ವಿದ್ಯಾರ್ಥಿಗಳು ಸಂಸ್ಥೆಯೊಂದಿಗೆ ನಿರಂತರ ಸಂಪರ್ಕ ಹೊಂದಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ವೇಳೆ ಎಲ್ಲ ಹಳೆಯ ವಿದ್ಯಾರ್ಥಿಗಳು ಸೇರಿ ಗುರುಗಳಿಗೆ ಗೌರವ ಸಲ್ಲಿಸುವ ‘ಗುರುವಂದನಾ’ ಕಾರ್ಯಕ್ರಮ ಆಯೋಜಿಸುವ ಆಶಯ ವ್ಯಕ್ತಪಡಿಸಿದರು.

ತಾರಾನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ಹಳೆಯ ವಿದ್ಯಾರ್ಥಿ ಸದಸ್ಯ ಪಾರಸಮಲ್ ಸುಖಾಣಿ ಮಾತನಾಡಿ, ಸಂಸ್ಥೆಯ ಪ್ರಗತಿ ಹಾಗೂ ಉತ್ತಮ ಸಮಾಜ ನಿರ್ಮಾಣದಲ್ಲಿ ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಗತ್ಯವಾಗಿದೆ ಎಂದರು. 300ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಹಾಗೂ ಹಳೆಯ ವಿದ್ಯಾರ್ಥಿ ವಸಂತಕುಮಾರ ಮಾತನಾಡಿ, ಎಲ್.ವಿ.ಡಿ. ಮಹಾವಿದ್ಯಾಲಯ ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ತಮ್ಮ ಕುಟುಂಬದ ಅನೇಕರು ಇದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದು ತಿಳಿಸಿದರು. ಕಾಲೇಜಿನ ಅಭಿವೃದ್ಧಿಗೆ ಸರ್ಕಾರ ಹಾಗೂ ಶಾಸಕರ ನಿಧಿಯಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರೊ. ಅಮರೇಶ ನುಗಡೋಣಿ ಮಾತನಾಡಿ, ಶಿಕ್ಷಣ ಸಂಸ್ಥೆಗಳ ಪ್ರಗತಿಯಲ್ಲಿ ಪ್ರಾಧ್ಯಾಪಕರ ಜೊತೆಗೆ ಹಳೆಯ ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆ ಅತ್ಯಂತ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ತಾವು ಓದಿದ ಕಾಲೇಜಿನಲ್ಲೇ ಸನ್ಮಾನ ಸ್ವೀಕರಿಸಿರುವುದು ಸಂತಸ ತಂದಿದೆ ಎಂದರು.

ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ವೀರಹನುಮಾನ ಮಾತನಾಡಿ, ಹಳೆಯ ವಿದ್ಯಾರ್ಥಿಗಳೇ ಸಂಸ್ಥೆಯ ಹೆಮ್ಮೆ ಮತ್ತು ಅಮೂಲ್ಯ ಆಸ್ತಿಯಾಗಿದ್ದು, ಸಮಾಜದ ಒಳಿತಿಗಾಗಿ ಸದಾ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಚೆನ್ನಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿ ಸಂಘದ ಚಟುವಟಿಕೆಗಳು ಹಾಗೂ ಮುಂದಿನ ಯೋಜನೆಗಳ ಕುರಿತು ವಿವರಿಸಿದರು. ಪ್ರಾಂಶುಪಾಲ ಶರಣಗೌಡ ಬಿ.ಎಚ್. ಮಾತನಾಡಿ, ಕಾಲೇಜಿಗೆ ನ್ಯಾಕ್ ‘ಎ’ ಗ್ರೇಡ್ ಲಭಿಸುವಲ್ಲಿ ಹಳೆಯ ವಿದ್ಯಾರ್ಥಿಗಳ ಸಹಕಾರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 75 ವರ್ಷ ಪೂರೈಸಿದ ಹಿರಿಯ ಸದಸ್ಯರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಾಗೂ ಉನ್ನತ ಪದವಿ ಪಡೆದ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಳೆಯ ವಿದ್ಯಾರ್ಥಿಗಳು ಕಾಲೇಜು ದಿನಗಳ ನೆನಪುಗಳನ್ನು ಹಂಚಿಕೊಂಡು ಪರಸ್ಪರ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡರು.

ಡಾ. ರಜಾಕ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾಂತೇಶ ಮಸ್ಕಿ ಅವರು ಪ್ರೊ. ಅಮರೇಶ ನುಗಡೋಣಿ ಅವರನ್ನು ಪರಿಚಯಿಸಿದರು. ಡಾ. ಆಂಜನೇಯ ಓಬಳೇಶ್ ಹಾಗೂ ಉಮಾಮಹೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ಮಲ್ಲಿಕಾರ್ಜುನ ಹಳ್ಳೂರು ಸ್ವಾಗತಿಸಿ, ಸಿದ್ದಪ್ಪ ವಂದಿಸಿದರು.

ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ನಗರದ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News