Raichur | ಸಾಮಾಜಿಕ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್.

ಬಾಲ್ಯ ವಿವಾಹ ನಿಷೇಧ, ಪೋಕ್ಸೊ ಕಾಯ್ದೆ, ಬಾಲಕಾರ್ಮಿಕತೆ ತಡೆ ಕಾಯ್ದೆ ಕುರಿತು ಸಭೆ

Update: 2026-07-27 16:25 IST

ರಾಯಚೂರು: ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟಗಳ ನಿರ್ಮೂಲನೆಗೆ ವ್ಯಾಪಕ ಜಾಗೃತಿ ಮೂಡಿಸಿ, ಜನರಲ್ಲಿ ಕಾನೂನಿನ ಅರಿವು ಹೆಚ್ಚಿಸಲು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಅಧಿಕಾರಿಗಳಿಗೆ ಸೂಚಿಸಿದರು.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ, ಪೋಕ್ಸೊ ಕಾಯ್ದೆ, ಬಾಲಕಾರ್ಮಿಕತೆ ತಡೆ ಹಾಗೂ ಪೌಷ್ಟಿಕ ಆಹಾರ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಜಾಗೃತಿ ಸಭೆಗಳು ಮತ್ತು ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಬಾಲ್ಯ ವಿವಾಹ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ಆಡಳಿತ ಮತ್ತು ವಿವಿಧ ಇಲಾಖೆಗಳ ಸಮನ್ವಯದಿಂದ ಬಾಲ್ಯ ವಿವಾಹಗಳನ್ನು ಮುಂಚಿತವಾಗಿ ಪತ್ತೆಹಚ್ಚಿ, ತಪ್ಪಿತಸ್ಥರು ಹಾಗೂ ಪ್ರೋತ್ಸಾಹಿಸುವವರ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುವ ಪ್ರದೇಶಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲೆ ಅಥವಾ ಕಾಲೇಜಿನ ವಿದ್ಯಾರ್ಥಿಗಳು ಎರಡು ದಿನಗಳಿಗಿಂತ ಹೆಚ್ಚು ರಜೆ ಪಡೆದರೂ ಶಿಕ್ಷಕರು, ಅಂಗನವಾಡಿ, ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ನಿಗಾ ವಹಿಸಬೇಕು ಎಂದು ಹೇಳಿದರು.

ವಸತಿ ನಿಲಯಗಳಿಂದ ರಜೆಗೆ ತೆರಳುವ ಮಕ್ಕಳ ಮಾಹಿತಿಯನ್ನು ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ, ಕಂದಾಯ ಹಾಗೂ ಆರೋಗ್ಯ ಇಲಾಖೆಯ ಎಎನ್‌ಎಂ ಸಿಬ್ಬಂದಿಗೆ ನೀಡುವಂತೆ ಸೂಚಿಸಿದ ಅವರು, ಯಾವುದೇ ಮಾಹಿತಿ ಬಂದ ಕೂಡಲೇ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿ ಬಾಲ್ಯ ವಿವಾಹ ತಡೆಯಬೇಕು ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, 2026ರ ಏಪ್ರಿಲ್‌ನಿಂದ ಜೂನ್‌ವರೆಗೆ ಜಿಲ್ಲೆಯಲ್ಲಿ ಮೂರು ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ನಂದಿತಾ ಎಮ್.ಎನ್., ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ತಾಲೂಕು ಆರೋಗ್ಯಾಧಿಕಾರಿಗಳು, ಸಿಡಿಪಿಒಗಳು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News