Raichur | ಸೋನಂ ವಾಂಗ್ಚುಕ್ ಅವರ ಹೋರಾಟ ಹತ್ತಿಕ್ಕುವ ಧೋರಣೆ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹ; ನೀಟ್ ಅಕ್ರಮಗಳ ಸ್ವತಂತ್ರ ತನಿಖೆಗೆ ಒತ್ತಾಯ
ರಾಯಚೂರು : ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಹಾಗೂ ಲಡಾಖ್‌ನ ಧ್ವನಿಯಾಗಿ ಗುರುತಿಸಿಕೊಂಡಿರುವ ಸೋನಂ ವಾಂಗ್ಚುಕ್ ಅವರನ್ನು ಉಪವಾಸ ಸತ್ಯಾಗ್ರಹದ ವೇಳೆ ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ಉದ್ಯಾನದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಅನೇಕ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದ್ದು, ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ಸಂದರ್ಭದಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕಾಗಿತ್ತು. ಆದರೆ, ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿ ಹೋರಾಟ ಹತ್ತಿಕ್ಕಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆರೋಪಿಸಿದರು.
NEET ಸೇರಿದಂತೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ಕಾರ್ಯವೈಖರಿಯ ಸಮಗ್ರ ಪರಿಶೀಲನೆ ನಡೆಸಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸಬೇಕು. ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ಸುಧಾರಣೆಗಳನ್ನು ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹೋರಾಟಗಾರ ಶರಣ ಕುಮಾರ ಮುದ್ದಮಗುಡ್ಡಿ, ಕುಮಾರ ಸಮತಳ, ಮಾರೆಪ್ಪ ಹರವಿ, ಫೈಸಲ್ ಖಾನ್, ಶ್ರೀನಿವಾಸ ಕಲವಲದೊಡ್ಡಿ, ಖಾಜಾ ಅಸ್ಲಂ ಅಹ್ಮದ್ ಮತ್ತಿತರರು ಇದ್ದರು.