×
Ad

ರಾಯಚೂರು | ಬೇಸಿಗೆ ಹಿನ್ನೆಲೆ : ಪ್ರತಿ ತಾಲೂಕಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲು ಜಿಲ್ಲಾಧಿಕಾರಿ ಆದೇಶ

Update: 2025-03-04 19:28 IST

ರಾಯಚೂರು : ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಪ್ರತಿ ತಾಲೂಕಿಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಆದೇಶ ಹೊರಡಿಸಿದ್ದಾರೆ.

ಈ ನೋಡಲ್ ಅಧಿಕಾರಿಗಳು ಕಾಳಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ನಿಯೋಜಿಸಿದ ತಾಲೂಕುಗಳಿಗೆ ವಾರದಲ್ಲಿ ಕನಿಷ್ಠ ಒಂದು ಬಾರಿ ಭೇಟಿ ನೀಡಿ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳೊಂದಿಗೆ ಅಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ಚರ್ಚಿಸಬೇಕು. ಪ್ರತಿ ಶನಿವಾರ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳೊಂದಿಗೆ ಸಭೆ ನಡೆಯುವಂತೆ ನೋಡಿಕೊಳ್ಳಬೇಕು.

ಸಭೆಯಲ್ಲಿ ಚರ್ಚಿಸಿದ ಅಂಶಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು. ನೋಡಲ್ ಅಧಿಕಾರಿಗಳು ಆಯಾ ತಾಲೂಕಿನ ಕುಡಿಯುವ ನೀರಿನ ಕೊರತೆಯಾಗದಂತೆ ಕುರಿತಾದ ಎಲ್ಲಾ ಮುಂಜಾಗ್ರತಾ ಕಾರ್ಯಗಳನ್ನು ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕು. ಇವರುಗಳು ನೀಡುವ ನಿರ್ದೇಶನದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು.

ನೋಡಲ್ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಬೇಕು. ಜಿಲ್ಲಾಧಿಕಾರಿಗಳ ಅನುಮತಿ ಪಡೆಯದೇ ರಜೆಯನ್ನು ಪಡೆಯಬಾರದು. ಮತ್ತು ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ. ಒಂದು ವೇಳೆ ಕರ್ತವ್ಯದಲ್ಲಿ ನಿರ್ಲಕ್ಷ್ಯತನ ಅಥವಾ ಬೇಜವಾಬ್ದಾರಿ ವಹಿಸಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News