Raichur | ಗ್ರಾಪಂಗಳಿಗೆ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿ, ವಿವಿಧ ಚಟುವಟಿಕೆ ಪರಿಶೀಲಿಸಿದ ಸಿಇಒ ಈಶ್ವರ್ ಕಾಂದೂ
ರಾಯಚೂರು : ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಅವರು ದಿಢೀರ್ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.
ಮೊದಲು ಮಾನ್ವಿ ತಾಲೂಕಿನ ಕುರ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಡಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ವಿಬಿ–ಜಿ ರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಎನ್‌ಎಂಆರ್ ಮೂಲಕ ಕೂಲಿ ಕಾರ್ಮಿಕರ ಹಾಜರಾತಿ ಹಾಗೂ ಕೆಲಸದ ಮಾಹಿತಿಯನ್ನು ಪಡೆದು, ಎನ್‌ಎಂಎಂಎಸ್ ಆನ್‌ಲೈನ್ ಹಾಜರಾತಿಯನ್ನೂ ಪರಿಶೀಲಿಸಿದರು. ಈ ವೇಳೆ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು.
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನಿರಂತರವಾಗಿ ಉದ್ಯೋಗ ಒದಗಿಸುವಂತೆ ಕಾರ್ಮಿಕರು ಮನವಿ ಮಾಡಿದರು. ಅಲ್ಲದೆ, 125 ದಿನಗಳಿಗಿಂತ ಹೆಚ್ಚುವರಿಯಾಗಿ ಇನ್ನೂ 50 ದಿನಗಳ ಕೂಲಿ ಕೆಲಸ ಒದಗಿಸುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಅವರು, ಕಾರ್ಮಿಕರ ಮನವಿಯಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ನಂತರ ಆರೋಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಹಾಜರಾತಿಯನ್ನು ಪರಿಶೀಲಿಸಿದರು. ನಿರಂತರ ಶಿಕ್ಷಣದ ಹಾಜರಾತಿ ಕುರಿತು ಮಾಹಿತಿ ಪಡೆದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಬಟ್ಟೆ, ಪುಸ್ತಕ ಸೇರಿದಂತೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಸಮರ್ಪಕವಾಗಿ ವಿತರಿಸಲಾಗುತ್ತಿವೆಯೇ ಎಂಬುದನ್ನು ವಿಚಾರಿಸಿದರು.
ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ದಾಸ್ತಾನು, ಮಕ್ಕಳಿಗೆ ಒದಗಿಸಲಾಗುತ್ತಿರುವ ಆಹಾರ ಹಾಗೂ ಇತರ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
ನಂತರ ಮಾನ್ವಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ವಹಿಸಲಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದರು. ಮೆನು ಚಾರ್ಟ್ ಪ್ರಕಾರ ವಿದ್ಯಾರ್ಥಿನಿಯರಿಗೆ ಊಟ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಊಟದ ಗುಣಮಟ್ಟ ಹಾಗೂ ವಸತಿ ನಿಲಯದಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ದಾಸ್ತಾನು ಕೊಠಡಿಯನ್ನು ಪರಿಶೀಲಿಸಿದ ಅವರು, ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿದ್ದ ಊಟವನ್ನು ಸ್ವತಃ ಸವಿದು ಗುಣಮಟ್ಟ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾನ್ವಿ ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹಮ್ಮದ್, ಸಹಾಯಕ ನಿರ್ದೇಶಕಿ ದೀಪಾ ಅರಳಿಕಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ದೊಡಮನಿ, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸತೀಶ್, ಅಂಗನವಾಡಿ ಮೇಲ್ವಿಚಾರಕಿ ಮಲ್ಲಮ್ಮ ಸೇರಿದಂತೆ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು, ಕುರ್ಡಿ ಹಾಗೂ ಆರೋಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿಬಿ–ಜಿ ರಾಮ್‌ಜಿ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.