Raichur | ಸಾಮಾಜಿಕ ಸೌಹಾರ್ದತೆ ಕಾಪಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಪೂವಿತಾ ಎಸ್.
ರಾಯಚೂರು: ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ದೌರ್ಜನ್ಯ ಪ್ರಕರಣ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ನಿಯಂತ್ರಣ ಸಮಿತಿಗಳು ನಿಯಮಿತವಾಗಿ ಸಭೆ ನಡೆಸಿ, ದೌರ್ಜನ್ಯ ಪ್ರಕರಣಗಳು ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಬೇಕು. ಜಿಲ್ಲೆಯ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಗ್ರಾಮಗಳಲ್ಲಿ ಪ್ರತಿ ಬುಧವಾರ ಸಭೆ ನಡೆಸಿ, ವಿವಿಧ ಸಮುದಾಯಗಳ ನಡುವೆ ಸಾಮಾಜಿಕ ಸೌಹಾರ್ದತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ದೌರ್ಜನ್ಯ, ಬಾಲ್ಯವಿವಾಹ, ಬಾಲಕಾರ್ಮಿಕತೆ, ಅಸ್ಪೃಶ್ಯತೆ ಆಚರಣೆ ಸೇರಿದಂತೆ ಯಾವುದೇ ಪ್ರಕರಣಗಳು ಅಥವಾ ಸಮಸ್ಯೆಗಳು ಅಧಿಕಾರಿಗಳ ಗಮನಕ್ಕೆ ಬಂದಲ್ಲಿ, ಸಂಬಂಧಿಸಿದ ಇಲಾಖೆಗಳೊಂದಿಗೆ ತಕ್ಷಣ ಸಮನ್ವಯ ಸಾಧಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಗ್ರಾಮಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಸಾಮಾಜಿಕ ಸೌಹಾರ್ದತೆ ಹಾಗೂ ಕಾನೂನು ಅರಿವಿನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಅದೇ ರೀತಿ, ಗ್ರಾಮಗಳಲ್ಲಿ ಅಂಗನವಾಡಿ, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳ ಮೂಲಕ ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.