ರಾಯಚೂರು : ಕನ್ನಡ ಮಿತ್ರಕೂಟ ರಾಯಚೂರು ಹಾಗೂ ಗಡಿನಾಡು ಕನ್ನಡ ಸಂಘ, ಕೃಷ್ಣ ಇವರ ಸಹಯೋಗದಲ್ಲಿ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸೆ.23ರಂದು ಬೆಳಿಗ್ಗೆ 10.30ಕ್ಕೆ ಕೃಷ್ಣದಲ್ಲಿರುವ ಜಿಲ್ಲಾ ಪಂಚಾಯಿತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮಿತ್ರಕೂಟದ ಅಧ್ಯಕ್ಷ ಅಶೋಕ್ ಕುಮಾರ್ ಸಿ.ಕೆ. ಜೈನ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿಭಾಗದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವುದು ಹಾಗೂ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡ ಮಾಧ್ಯಮದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಮೂಲಕ ಅವರಲ್ಲಿ ಮತ್ತಷ್ಟು ಆತ್ಮವಿಶ್ವಾಸ ಮೂಡಿಸುವ ಪ್ರಯತ್ನ ಇದಾಗಿದೆ ಎಂದರು.

ಕಾರ್ಯಕ್ರಮವನ್ನು ತಾವೇ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯಿತಿ ಪ್ರೌಢಶಾಲೆಯ ಮುಖ್ಯಗುರು ಕಿಶೋರ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೂಸಗಿ ಹಾಗೂ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶರಣಿಕ ಕುಮಾರ ದೋಖಾ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗಡಿನಾಡು ಕನ್ನಡ ಸಂಘದ ಸಲಹಾ ಸಮಿತಿ ಸದಸ್ಯರಾದ ಮಲ್ಲನಗೌಡ, ಗ್ಯಾರೆ ನರಸಿಂಹಯ್ಯ ಶೆಟ್ಟಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಗಡಿಭಾಗದಲ್ಲಿ ಕನ್ನಡ ಭಾಷೆ, ಕನ್ನಡ ಶಾಲೆಗಳು ಹಾಗೂ ಕನ್ನಡಿಗರ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು. ಗಡಿಭಾಗದ ಕನ್ನಡಿಗರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು. 371(ಜೆ) ಮೀಸಲಾತಿ ಸೇರಿದಂತೆ ಗಡಿಭಾಗದ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಈ ಎಲ್ಲ ವಿಚಾರಗಳ ಕುರಿತು ಮುಂದಿನ ದಿನಗಳಲ್ಲಿ ಸಂಘಟನೆ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಅಶೋಕ್ ಕುಮಾರ್ ಸಿ.ಕೆ. ಜೈನ್ ಹೇಳಿದರು.

ಗಡಿಭಾಗದಲ್ಲಿ ಕನ್ನಡ ಶಾಲೆಗಳ ಸ್ಥಿತಿ ಹಾಗೂ ಕನ್ನಡಿಗರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಗೌರವಿಸುವುದರ ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ ಕಲ್ಪಿಸಬೇಕು. ಗಡಿಭಾಗದಲ್ಲಿ ಕನ್ನಡ ಭಾಷೆಯ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಪ್ಪ, ಗಡಿಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರದಿಂದ ಅನುದಾನ ಬರುತ್ತಿದ್ದರೂ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಗಡಿಭಾಗವನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು. ಗಡಿಭಾಗದ ಕನ್ನಡಿಗರ ಸಮಸ್ಯೆಗಳಿಗೆ ಆದ್ಯತೆ ನೀಡಿ, ಕನ್ನಡ ಭಾಷೆ ಹಾಗೂ ಕನ್ನಡ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಶೀರ್ ಅಹ್ಮದ್ ಹೊಸಮನಿ, ರುದ್ರಯ್ಯ, ಹನುಮಂತಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor