ರಾಯಚೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ–ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ರಾಯಚೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ವತಿಯಿಂದ ಭಾನುವಾರ ನಗರದ ಕನ್ನಡ ಭವನದಲ್ಲಿ, ರಾಯಚೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನವಾಗಿ ಆಯ್ಕೆಯಾದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಹಿರಿಯ ರಂಗಕರ್ಮಿ ವಿ.ಎನ್.ಅಕ್ಕಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ತನ್ನದೇ ಆದ ಘನತೆಯನ್ನು ಹೊಂದಿದ ಬಹು ದೊಡ್ಡ ಸಂಸ್ಥೆ. ಆ ಘನತೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮಾಡಬೇಕು ಜೊತೆಗೆ ಮುಂದಿನ ದಿನಗಳಲ್ಲಿ ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸಿ ಪರಿಷತ್ತಿನ ಗೌರವವನ್ನು ಮತ್ತಷ್ಟು ಹೆಚ್ಚಿಸಿ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಮಾತನಾಡಿ, ಈ ಹಿಂದಿನ ಅಧ್ಯಕ್ಷರು ಉತ್ತಮವಾದ ಕೆಲಸವನ್ನು ಮಾಡಿ ಪರಿಷತ್ತಿಗೆ ಗೌರವವನ್ನು ತಂದುಕೊಟ್ಟಿದ್ದಾರೆ. ಅವರಂತೆ ನೀವು ಕೂಡ ಮುಂದಿನ ದಿನಗಳಲ್ಲಿ ಉತ್ತಮವಾದ ಕೆಲಸವನ್ನು ಮಾಡಿ ಪರಿಷತ್ತಿನ ಗೌರವವನ್ನು ಹೆಚ್ಚಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಕ್ರಿಯಾ ಯೋಜನೆಯನ್ನು ರೂಪಿಸಿ ಉತ್ತಮವಾದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದರು.
ನಂತರ ನೂತನವಾಗಿ ಆಯ್ಕೆಯಾದ ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಬಿ.ವಿಜಯ ರಾಜೇಂದ್ರ ಅವರಿಗೆ ಪರಿಷತ್ತಿನ ಧ್ವಜವನ್ನು ನೀಡುವುದರ ಮೂಲಕ ಕಾರ್ಯಕ್ರಮಗಳನ್ನು ಆರಂಭಿಸಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಯಿತು.
ವೇದಿಕೆಯ ಮೇಲೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷರಾದ ನಾಗಪ್ಪ ಹೊರಪ್ಯಾಟಿ ಉಪಸ್ಥಿತರಿದ್ದರು
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾದ ರಾವುತ ರಾವ್ ಬರೂರ ಅವರು ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕೊನೆಯಲ್ಲಿ ಗೌರವ ಕಾರ್ಯದರ್ಶಿಗಳಾದ ಪ್ರತಿಭಾ ಗೋನಾಳ್ ಅವರು ಸರ್ವರಗೆ ವಂದಿಸಿದರು.