ರಾಯಚೂರು : ನಗರದ ಮಾವಿನಕೆರೆ ಅಭಿವೃದ್ಧಿ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸಲಾಗುತ್ತಿದ್ದು, ಚರಂಡಿ ನೀರನ್ನು ಕೆರೆಗೆ ಹರಿಸಲಾಗುತ್ತಿದೆ. ಕೆರೆ ಅಭಿವೃದ್ಧಿಗೆ 100 ಕೋಟಿ ರೂ. ಸುರಿಯುವ ಬದಲು ನಗರದ ಪ್ರಮುಖ ರಸ್ತೆಗಳ ಸುಧಾರಣೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಳಸಬೇಕಿತ್ತು ಎಂದು ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ನೈರ್ಮಲ್ಯ ಹಾಗೂ ಸ್ವಚ್ಛತೆಯ ಕೊರತೆಯಿಂದ ಜನರು ಪರದಾಡುತ್ತಿದ್ದಾರೆ. ಆದರೆ, ಸಣ್ಣ ನೀರಾವರಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾವಿನಕೆರೆ ಅಭಿವೃದ್ಧಿಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಗುಳುಂ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಗುರುವಾರ ಇಂದಿರಾನಗರದ ಮಾರ್ಗವಾಗಿ ಸಾಯಿ ಮಂದಿರದವರೆಗೆ ಮಾವಿನಕೆರೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅವರು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಣ್ಣ ನೀರಾವರಿ ಸಚಿವ ಡಾ.ಅಜಯ್ ಸಿಂಗ್, ಪಾಲಿಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಮಾವಿನಕೆರೆಯೊಳಗೆ ಚರಂಡಿ ನೀರು ಹರಿಸಲು ಸಿಮೆಂಟ್ ಪೈಪ್ ಅಳವಡಿಸಲಾಗಿದೆ. ಇದರಿಂದ ಕೆರೆಯ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು, ಸುತ್ತಮುತ್ತಲಿನ ನಿವಾಸಿಗಳು ದುರ್ವಾಸನೆ ತಡೆಯಲಾಗದ ಸ್ಥಿತಿ ನಿರ್ಮಾಣವಾಗಿದೆ. ಅಸ್ವಚ್ಛ ವಾತಾವರಣದಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ. ಮಳೆ ಬಂದಿಲ್ಲ ಎಂಬ ಕಾರಣಕ್ಕೆ ಕೆರೆಗೆ ಚರಂಡಿ ನೀರು ಹರಿಸಿದರೆ ಅದನ್ನು ಅಭಿವೃದ್ಧಿ ಎನ್ನಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.

ಕೆರೆಯ ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಹಾಗೂ ಅವ್ಯವಹಾರ ನಡೆಯುತ್ತಿದೆ. ಆದರೆ, ಮಹಾನಗರ ಪಾಲಿಕೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನವಾಗಿದ್ದಾರೆ. ಕಾಮಗಾರಿಗೆ ಖರ್ಚು ಮಾಡಿರುವ ಅನುದಾನದ ಕುರಿತು ಮಾಹಿತಿ ಕೇಳಿದರೂ ನೀಡುತ್ತಿಲ್ಲ. ಶಾಸಕಾಂಗ ಮತ್ತು ಕಾರ್ಯಾಂಗದವರು ಸೇರಿಕೊಂಡು ಸಾರ್ವಜನಿಕರ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಈ ಕುರಿತು ಶೀಘ್ರದಲ್ಲೇ ನ್ಯಾಯಾಂಗದ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದರು.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor