Raichur | ರಿಮ್ಸ್ ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಮಹಿಳಾ ಆಯೋಗ ಅಧ್ಯಕ್ಷೆ ದಿಢೀರ್ ಭೇಟಿ
ಮೂಲಸೌಕರ್ಯ, ಮಹಿಳಾ ಸುರಕ್ಷತೆ ಮತ್ತು ಆರೋಗ್ಯ ಸೇವೆಗಳ ಪರಿಶೀಲನೆ
ರಾಯಚೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶುಕ್ರವಾರ ರಾಯಚೂರು ಕೇಂದ್ರೀಯ ಬಸ್ ನಿಲ್ದಾಣ ಹಾಗೂ ರಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಮೊದಲು ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯವೈಖರಿ ಪರಿಶೀಲಿಸಿದರು. ಮಕ್ಕಳ ಸಹಾಯವಾಣಿ, ಮಹಿಳಾ ಸಹಾಯವಾಣಿ ಸೇರಿದಂತೆ ಅಗತ್ಯ ಸಹಾಯವಾಣಿ ಫಲಕಗಳನ್ನು ಸ್ಪಷ್ಟವಾಗಿ ಅಳವಡಿಸಬೇಕು ಎಂದು ಸೂಚಿಸಿದರು. ಕುಡಿಯುವ ನೀರಿನ ಘಟಕ, ಮಹಿಳೆಯರ ನಿರೀಕ್ಷಣಾ ಕೊಠಡಿ ಹಾಗೂ ತಾಯಿ–ಮಗುವಿಗೆ ಹಾಲುಣಿಸುವ ಕೊಠಡಿಗೆ ಭೇಟಿ ನೀಡಿ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.
ಶೌಚಗೃಹಗಳಲ್ಲಿ ಪುರುಷ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವುದು ಹಾಗೂ ಅಧಿಕ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ಮುಂದುವರಿದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಜಿಲ್ಲಾ ನಿಯಂತ್ರಣಾಧಿಕಾರಿ ಇಮಾಮ್ ಸಾಬ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶರಣಮ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ ಅವರು ವಿವಿಧ ವಾರ್ಡ್‌ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಚಿಕಿತ್ಸೆ ಹಾಗೂ ಸೌಲಭ್ಯಗಳ ಕುರಿತು ರೋಗಿಗಳೊಂದಿಗೆ ಮಾತುಕತೆ ನಡೆಸಿದರು.
ನಾಲ್ಕನೇ ಮಹಡಿಯ ಶುಚಿತ್ವ ಪರಿಶೀಲಿಸಿದ ಅವರು, ಬಾಣಂತಿಯರ ವಿಭಾಗಕ್ಕೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು. ಔಷಧಿಗಳನ್ನು ಆಸ್ಪತ್ರೆಯಲ್ಲಿಯೇ ನೀಡಲಾಗುತ್ತಿದೆಯೇ ಅಥವಾ ಹೊರಗಿನಿಂದ ಖರೀದಿಸಲು ಸೂಚಿಸಲಾಗುತ್ತಿದೆಯೇ ಎಂಬ ಮಾಹಿತಿಯನ್ನೂ ಪಡೆದುಕೊಂಡರು.
ಬಾಣಂತಿಯರಿಗೆ ಗುಣಮಟ್ಟದ ಚಿಕಿತ್ಸೆ ಹಾಗೂ ಸಮರ್ಪಕ ಆರೈಕೆ ಒದಗಿಸಬೇಕು. ಸರ್ಕಾರದ ಸೌಲಭ್ಯಗಳು ಯಾವುದೇ ಲೋಪವಿಲ್ಲದೆ ಅವರಿಗೆ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅಲ್ಲದೆ, ದಂತ ವಿಭಾಗ, ರಕ್ತ ನಿಧಿ ಕೇಂದ್ರ, ಕ್ಷ-ಕಿರಣ ವಿಭಾಗ, ಅಲ್ಟ್ರಾಸೌಂಡ್ ಸ್ಕ್ಯಾನ್ ಘಟಕ ಹಾಗೂ ಔಷಧಿ ವಿತರಣಾ ಕೇಂದ್ರಕ್ಕೂ ಭೇಟಿ ನೀಡಿ ಸೇವೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ರಿಮ್ಸ್ ಆಸ್ಪತ್ರೆಯ ನಿರ್ದೇಶಕರಾದ ಡಾ.ರಮೇಶ ಬಿ.ಹೆಚ್., ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ವಿಜಯ ಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ರಿಮ್ಸ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಸೂರ್ಯಕಾಂತ್, ಡಾ.ಅರವಿಂದ ಸಾಗವಿ, ಡಾ.ಜಯಕೃಷ್ಣ, ಡಾ.ಸೋಮಶೇಖರ, ಡಾ.ಶರಣಬಸವ ಸೇರಿದಂತೆ ರಿಮ್ಸ್ ಆಸ್ಪತ್ರೆಯ ವಿವಿಧ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.