×
Ad

ರಾಯಚೂರು | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನಿಗಾವಹಿಸಿ : ಸಿಇಓ ಈಶ್ವರ್‌ ಕಾಂದೂ

ಪ್ರಗತಿ ಪರಿಶೀಲನಾ ಸಭೆ

Update: 2026-01-28 21:16 IST

ರಾಯಚೂರು : ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ನಿಗಾ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕಾಂದೂ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜ.28ರಂದು ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಭರ್ತಿ ಮಾಡಬೇಕು, ಬೋರ್‌ವೆಲ್‌ಗಳ ನೀರಿನ ಇಳುವರಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದಲ್ಲಿ ಹೊಸ ಬೋರ್‌ವೆಲ್‌ಗಳನ್ನು ಕೊರೆಯಿಸಬೇಕು. ನೀರಿನ ತೊಟ್ಟಿಗಳನ್ನು ನಿಯಮಿತವಾಗಿ ಶುಚಿಗೊಳಿಸುವುದು ಕಡ್ಡಾಯ ಎಂದು ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲ ಮೂಲಗಳಿಗೆ ಸಂಬಂಧಿಸಿದ ಯಾವುದೇ ಅಹಿತಕರ ಘಟನೆ ಸಂಭವಿಸಿದರೆ, ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೋರ್‌ವೆಲ್‌ಗಳ ಮರುಪೂರಣ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ 2026–27ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಸೇರಿಸಬೇಕು. ಜಲ ಜೀವನ್ ಮಿಷನ್ (ಜೆಜೆಎಂ) ಹಾಗೂ ಜಲಧಾರೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.

ಸ್ವ-ಸಹಾಯ ಗುಂಪುಗಳನ್ನು ಬಲಪಡಿಸುವ ಉದ್ದೇಶದಿಂದ ಕುಕ್ಕುಟ ಸಂಜೀವಿನಿ ಯೋಜನೆ ಆರಂಭಿಸಲಾಗುತ್ತಿದೆ. ಶಾಲೆ, ಅಂಗನವಾಡಿ ಹಾಗೂ ಹಾಸ್ಟೆಲ್‌ಗಳಿಗೆ ಮಹಿಳಾ ಒಕ್ಕೂಟಗಳಿಂದಲೇ ಮೊಟ್ಟೆ ಪೂರೈಕೆ ಮಾಡಲಾಗುವುದು. ಪ್ರತಿ ಗ್ರಾಮ ಪಂಚಾಯತ್‌ವು 2026–27ನೇ ಸಾಲಿನ ನರೇಗಾ ಕ್ರಿಯಾ ಯೋಜನೆಯಲ್ಲಿ ಕಡ್ಡಾಯವಾಗಿ ಕುಕ್ಕುಟ ಶೆಡ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕು.

ದೈನಂದಿನ ಬಳಕೆಯ ವಸ್ತುಗಳ ಮಾರಾಟಕ್ಕೆ ತಾಲೂಕು ಕೇಂದ್ರದಲ್ಲಿ ಸಂಜೀವಿನಿ ಮಾರ್ಟ್ ನಿರ್ಮಿಸಲಾಗುತ್ತಿದ್ದು, ಇದನ್ನು ಮಹಿಳಾ ಒಕ್ಕೂಟವೇ ನಿರ್ವಹಿಸಲಿದೆ ಎಂದು ತಿಳಿಸಿದರು.

ಕುಡಿಯುವ ನೀರು ಪೂರೈಕೆ, ಗ್ರಂಥಾಲಯಗಳು, ಬೀದಿ ದೀಪಗಳ ನಿರ್ವಹಣೆ, ಜಲ ಮೂಲಗಳ ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳ ಸಮರ್ಪಕ ನಿರ್ವಹಣೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಗಮನ ನೀಡಬೇಕು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಿಇಓ ಈಶ್ವರ್‌ ಕಾಂದೂ ಹೇಳಿದರು.

ಈ ಸಭೆಯಲ್ಲಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ್, ವಿವಿಧ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News