×
Ad

ಕಲ್ಯಾಣ ಕರ್ನಾಟಕಕ್ಕೆ ಆರೋಗ್ಯ ಇಲಾಖೆಯ ಉತ್ತೇಜನಕ್ಕಾಗಿ 857 ಕೋಟಿ ರೂ. ಅನುದಾನ ಮಂಜೂರು : ಸಚಿವ ದಿನೇಶ್ ಗುಂಡೂರಾವ್

Update: 2025-09-27 17:18 IST

ಸಿಂಧನೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಇಲಾಖೆಯ ಉತ್ತೇಜನಕ್ಕಾಗಿ 857 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಾರಂಭವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಶನಿವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 350 ಕೋಟಿ ರೂ. ಹಾಗೂ ಸರ್ಕಾರದಿಂದ 500 ಕೋಟಿ ರೂ. ಅನುದಾನ ನೀಡಲಾಗಿದೆ. “ಇದು ಆರೋಗ್ಯ ಇಲಾಖೆಗೆ ದೊರಕಿದ ಐತಿಹಾಸಿಕ ಅನುದಾನ” ಎಂದು ಹೇಳಿದರು.

ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 3 ಸಮುದಾಯ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗುತ್ತಿದ್ದು, ಲಿಂಗಸೂಗೂರು ತಾಲ್ಲೂಕಿಗೆ ಕ್ರಿಟಿಕಲ್ ಕೇರ್ ಆಸ್ಪತ್ರೆ ಮಂಜೂರಾಗಿದೆ. ರಾಯಚೂರು ಜಿಲ್ಲೆಗೆ ಒಟ್ಟು 16 ಹೊಸ ಕಟ್ಟಡಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಯಾದಗಿರಿ ಸೇರಿದಂತೆ ಎರಡು ಜಿಲ್ಲೆಗಳಲ್ಲಿ ಆರೋಗ್ಯ ಆವಿಷ್ಕಾರ ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಿದ್ದು, ಆರೋಗ್ಯ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಯಲಿದೆ ಎಂದರು.

ಬಸವಕಲ್ಯಾಣ ಮತ್ತು ಸಿಂಧನೂರು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಹೆಚ್ಚುವರಿ 100 ಹಾಸಿಗೆಗಳು, ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನಿಂಗ್ ಸೌಲಭ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ 1,800 ಎಂಬಿಬಿಎಸ್ ವೈದ್ಯರ ನೇಮಕಾತಿ ಮಾಡಲಾಗಿದೆ. “ರಾಜ್ಯದಲ್ಲಿ ವೈದ್ಯರ ಕೊರತೆ ಇಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಶಾಸಕ ಹಂಪನಗೌಡ ಬಾದರ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News