ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ: ಜನಪ್ರತಿನಿಧಿಗಳ ಗೈರು ಖಂಡಿಸಿ ಪ್ರತಿಭಟನೆ
ರಾಯಚೂರು; 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಪ್ರಮುಖರಾದ ಶಿವಯೋಗಿ ಸಿದ್ಧರಾಮೇಶ್ವರ ಅವರ ಜಯಂತಿಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಚರಣೆ ಮಾಡಲಾಯಿತು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಷಗಿರಿ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಸೇರಿದಂತೆ ಇತರೆ ಗಣ್ಯರು ಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಸಂತೋಷ ರಾಣಿ, ಸಿಪಿಐಗಳಾದ ಉಮೇಶ ಕಾಂಬಳೆ, ನಾಗರಾಜ್ ಮೇಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಆದರೆ ಕಾರ್ಯಕ್ರಮಕ್ಕೆ ಕೆಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗೈರಾಗಿರುವುದರಿಂದ ಬೋವಿ ಸಮಾಜದ ಮುಖಂಡರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಮಾತ್ರ ಏಕೆ ಅಧಿಕಾರಿಗಳು ಗೈರಾಗುತ್ತಾರೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಬೋವಿ ಸಮಾಜದ ಅಧ್ಯಕ್ಷ ನಾರಾಯಣಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ಭೀಮರಾಯ ಸೇರಿದಂತೆ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.