×
Ad

ಸಿಂಧನೂರು: ವಿದ್ಯಾರ್ಥಿನಿ ಕೊಲೆ ಪ್ರಕರಣ, ಸಿಪಿಐಎಂಎಲ್ ಲಿಬರೇಶನ್ ನಿಂದ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ

Update: 2025-01-31 12:35 IST

ಸಿಪಿಐಎಂಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್

ರಾಯಚೂರು: ಜಿಲ್ಲೆಯ ಸಿಂಧನೂರು ನಗರದಲ್ಲಿ ಸರ್ಕಾರಿ ಪದವಿ ಮಹಾವಿದ್ಯಾಲಯದ ಎಂಎಸ್‌ಸಿ ಸ್ನಾತಕೋತ್ತರ ವಿದ್ಯಾರ್ಥಿನಿ ಶಿಫಾ ಅವರನ್ನು ಚಾಕುವಿನಿಂದ ಇರಿದು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿರುವುದು ಅತ್ಯಂತ ಅಮಾನುಷ ಹಾಗೂ ಪೈಶಾಚಿಕ ಕೃತ್ಯವಾಗಿದ್ದು, ಆರೋಪಿ ಮುಬಿನ್‌ಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರು ಹಾಗೂ ಪಾಲಕರ ಆತಂಕವನ್ನು ನಿವಾರಣೆ ಮಾಡಬೇಕೆಂದು ಸಿಪಿಐಎಂಎಲ್ ಲಿಬರೇಶನ್ ರಾಯಚೂರು ಜಿಲ್ಲಾ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.

ಈ ಕುರಿತು ಶುಕ್ರವಾರ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐಎಂಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್, ಜಿಲ್ಲಾ ಮುಖಂಡರಾದ ಅಜೀಜ್ ಜಾಗೀರದಾರ, ರವಿಚಂದ್ರ ಅವರು,  ಪ್ರೀತಿ ಮಾಡಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಂದಿಗೆ ಅಮಾನವೀಯತೆಯಿಂದ ವರ್ತಿಸಿ ಭೀಕರವಾಗಿ ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯವಾಗಿದೆ. ಇಂತಹ ಕೃತ್ಯಗಳಲ್ಲಿ ಯಾರೇ ಭಾಗಿಯಾದರೂ ಅವರನ್ನು ತನಿಖೆಗೆ ಒಳಪಡಿಸಿ ಅತ್ಯಂತ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಘಟನೆ ವಿದ್ಯಾರ್ಥಿನಿಯರು, ಅವರ ಪಾಲಕರು ಹಾಗೂ ಮಹಿಳಾ ಸಮುದಾಯದಲ್ಲಿ ಆತಂಕವನ್ನು ಉಂಟುಮಾಡಿದೆ. ಇತ್ತೀಚಿನ ದಿನಗಳಲ್ಲಿ ಯುವತಿಯರು ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸುತ್ತಿರುವ ಸಂದರ್ಭದಲ್ಲಿ ಇಂತಹ ಅಮಾನವೀಯ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇದು ಅವರ ಶೈಕ್ಷಣಿಕ ಹಿನ್ನಡೆಗೆ ಕಾರಣವಾಗುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು, ಫಾಸ್ಟ್‌ಟ್ರ್ಯಾಕ್ ಕೋರ್ಟ್ ಮೂಲಕ ಈ ಕೊಲೆ ಪ್ರಕರಣವನ್ನು ಅತ್ಯಂತ ಶೀಘ್ರಗತಿಯಲ್ಲಿ ವಿಚಾರಣೆ ನಡೆಸಿ ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸಬೇಕು ಹಾಗೂ ಸರ್ಕಾರ ಮತ್ತು ಪೊಲೀಸ್ ಇಲಾಖೆ, ಈ ತರಹದ ದುಷ್ಕೃತ್ಯಗಳು ಮರುಕಳಿಸದಂತೆ ನಿರ್ಭಯಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ವಿದ್ಯಾರ್ಥಿನಿಯರಿಗೆ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಪೊಲೀಸ್ ಇಲಾಖೆ ಹಾಗೂ ಸರ್ಕಾರವನ್ನು ಅವರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News