Sindhanur | ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡನೀಯ: ನಾಗರಾಜ ಪೂಜಾರ್

"ಸೋನಂ ವಾಂಗ್ಚುಕ್ ಅವರೊಂದಿಗೆ ಸರ್ಕಾರ ಸಂವಾದ ನಡೆಸಬೇಕು"

Update: 2026-07-21 17:12 IST

ಸಿಂಧನೂರು: ಹೊಸದಿಲ್ಲಿಯ ಜಂತರ್-ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿರುವ ಸಿಪಿಐ(ಎಂಎಲ್) ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ ಪೂಜಾರ್, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.

ಸೋಮವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಅವರು, ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು ಹಾಗೂ ಶಿಕ್ಷಣ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ, ಅದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಟಿಯರ್ ಗ್ಯಾಸ್ ಪ್ರಯೋಗಿಸಿ, ಲಾಠಿಚಾರ್ಜ್ ನಡೆಸಿರುವುದು ಅಮಾನವೀಯ ಕೃತ್ಯವಾಗಿದೆ ಎಂದು ಟೀಕಿಸಿದ್ದಾರೆ.

ಸಂಪೂರ್ಣ ಆಡಳಿತ ವೈಫಲ್ಯದಿಂದ ಕಂಗೆಟ್ಟಿರುವ ಬಿಜೆಪಿ ಸರ್ಕಾರ ಪೊಲೀಸರನ್ನು ಮುಂದೆ ಬಿಟ್ಟು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಿರುವ ಅವರು, ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರೊಂದಿಗೆ ಮಾತುಕತೆಗೆ ಮುಂದಾಗದೆ, ಅವರನ್ನು ಬಲವಂತವಾಗಿ ಸತ್ಯಾಗ್ರಹ ಸ್ಥಳದಿಂದ ಕರೆದೊಯ್ದಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತುವವರನ್ನು ಪೊಲೀಸ್ ಹಾಗೂ ಇತರೆ ಸಾರ್ವಜನಿಕ ಸಂಸ್ಥೆಗಳ ಮೂಲಕ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದು, ಇದನ್ನು ದೇಶದ ಜನರು ಗಮನಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ನಾಗರಾಜ ಪೂಜಾರ್ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News