ಸಿಂಧನೂರು | ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ನಿರ್ಲಕ್ಷ್ಯ: ಸಹಕಾರಿ ಸಂಸ್ಥೆ ವಿರುದ್ಧ ಪ್ರಕರಣ ದಾಖಲು
ಸಿಂಧನೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಬೇಕೆಂಬ ಸರ್ಕಾರದ ಆದೇಶವಿದ್ದರೂ, ಅದನ್ನು ನಿರ್ಲಕ್ಷ್ಯ ಮಾಡಿದ ಆರೋಪದಡಿ ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಗುರುರಾಜ್ ಅವರು ನೀಡಿದ ದೂರಿನ ಆಧಾರದಲ್ಲಿ ಸಹಕಾರಿ ನಿಯಮಿತದ ಮೂವರು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಣರಾಜ್ಯೋತ್ಸವ ಆಚರಣೆಯಲ್ಲಿ ಕಡ್ಡಾಯವಾಗಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳನ್ನು ಇಡಬೇಕು ಎಂಬ ಸರ್ಕಾರದ ನಿಯಮವಿದ್ದರೂ, ಸಹಕಾರಿ ಸಂಸ್ಥೆಯವರು ಮಹಾತ್ಮ ಗಾಂಧೀಜಿ ಹಾಗೂ ಸಹಕಾರಿ ಪಿತಾಮಹ ಸಿದ್ದನಗೌಡ ಪಾಟೀಲ್ ಅವರ ಭಾವಚಿತ್ರಗಳನ್ನು ಮಾತ್ರ ಇಟ್ಟು ಕಾರ್ಯಕ್ರಮ ನಡೆಸಿದ್ದಾರೆ. ಇದರಿಂದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಾಖೆಯ ವ್ಯವಸ್ಥಾಪಕ ಲಿಂಗನಗೌಡ ಹಾಗೂ ಶಾಖೆಯ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.