ಸಿಂಧನೂರು | ಪೋಲಿಯೋ ಅಭಿಯಾನಕ್ಕೆ ವಿಧಾನಪರಿಷತ್ ಶಾಸಕರಿಂದ ಚಾಲನೆ
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಕ್ಕಳ ಆರೋಗ್ಯ ಮುಖ್ಯ: ಬಸನಗೌಡ ಬಾದರ್ಲಿ
ಸಿಂಧನೂರು.ಡಿ.21: ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ಮಕ್ಕಳು ಆರೋಗ್ಯವಂತರಾಗಿರಬೇಕು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರ ನೀಡಬೇಕು ಎಂದು ವಿಧಾನಪರಿಷತ್ ಶಾಸಕ ಬಸನಗೌಡ ಬಾದರ್ಲಿ ಹೇಳಿದರು.
ಅವರು ರವಿವಾರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಲಸಿಕೆ ಹಾಕಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ರಾಷ್ಟ್ರದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆ ಆಗಿದೆ. ಮತ್ತೆ ಪೋಲಿಯೋ ವೈರಸ್‌ನಿಂದ ಅಂಗವೈಕಲ್ಯಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ತಮ್ಮ ನವಜಾತ ಶಿಶುವಿನಿಂದ ಹಿಡಿದು 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದು ಹೇಳಿದರು.
ಡಿ.22ರಿಂದ 24ರ ವರೆಗೆ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗಳಿಗೆ ಭೇಟಿ ಕೊಟ್ಟು ಲಸಿಕೆ ಹಾಕದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಿದ್ದಾರೆ. ಐದು ವಷರ್ದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೊ ಹನಿ ಹಾಕಿಸುವ ಮೂಲಕ ಆರೋಗ್ಯವಂತ ಸದೃಢ ಸಮಾಜ ನಿರ್ಮಾಣ ಮಾಡಬೇಕು ಎಂದು ಅವರು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ ಮಾತನಾಡಿ, ತಾಲೂಕಿನಲ್ಲಿ 5 ವರ್ಷದೊಳಗಿನ 45,571 ಮಕ್ಕಳಿದ್ದು, 248 ಮೇಲ್ವಿಚಾರಕರ ತಂಡಗಳನ್ನು ರಚನೆ ಮಾಡಿದ್ದು 14 ಸಂಚಾರಿ ತಂಡಗಳನ್ನು ರಚಿಸಲಾಗಿದೆ. ಮೂರು ದಿನಗಳ ಕಾಲ ಅಂಗನವಾಡಿ, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆ ಮನೆಗೆ ಹೋಗಿ ಮಕ್ಕಳಿಗೆ ಪೋಲಿಯೊ ಹಾಕಲಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಾರ್ವಜನಿಕರು ಸಹಕಾರ ನೀಡಿ ಪೋಲಿಯೊ ಮುಕ್ತ ತಾಲೂಕು ನಿರ್ಮಾಣ ಮಾಡೋಣ ಎಂದು ಹೇಳಿದರು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ಸುರೇಶಗೌಡ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಿಂಗನಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ, ವೈದ್ಯರಾದ ಡಾ.ಹನುಮಂತರೆಡ್ಡಿ, ಡಾ.ನಾಗರಾಜ ಕಾಟ್ವಾ, ಡಾ.ಶೃತಿ, ಡಾ.ಮಂಜುನಾಥ ಅಣಗೌಡರ್, ಡಾ.ಅಮ್ಜದ್ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.