Sindhanur | ಸೋನಮ್ ವಾಂಗ್ಚುಕ್ ಉಪವಾಸಕ್ಕೆ ಬೆಂಬಲಿಸಿ ಜು.17ರಂದು ಧರಣಿ ಸತ್ಯಾಗ್ರಹ
ಸಿಂಧನೂರು : ಶಿಕ್ಷಣತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಮತ್ತು ವಿದ್ಯಾರ್ಥಿ ಸಂಘಟನೆಗಳು ಹೊಸದಿಲ್ಲಿಯ ಜಂತರ್‌ಮಂತರ್‌ನಲ್ಲಿ ಕಳೆದ 18 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ಜುಲೈ 17ರಂದು ಬೆಳಿಗ್ಗೆ 10.30ಕ್ಕೆ ನಗರದ ತಹಸೀಲ್ದಾರ್ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಗುರುವಾರ ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕೂಟದ ಸಂಚಾಲಕರಾದ ಚಂದ್ರಶೇಖರ ಗೊರಬಾಳ, ಡಿ.ಎಚ್. ಕಂಬಳಿ, ಎಸ್. ದೇವೇಂದ್ರಗೌಡ ಹಾಗೂ ನಾಗರಾಜ ಪೂಜಾರ್, ಬಸವರಾಜ ಬಾದರ್ಲಿ ಅವರು, ಕೇಂದ್ರ ಸರ್ಕಾರದ ಶಿಕ್ಷಣ ನೀತಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಖಂಡಿಸಿ ಈ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಸೋನಮ್ ವಾಂಗ್ಚುಕ್ ಹಾಗೂ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಕುರಿತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಂತೆ ಒತ್ತಾಯಿಸಿ ಧರಣಿ ಬಳಿಕ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯಗಳ ಮನವಿಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಹೋರಾಟದಲ್ಲಿ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ಹಾಗೂ ವಿವಿಧ ಪ್ರಜಾಸತ್ತಾತ್ಮಕ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.