Sindhanur | ವಿದ್ಯಾರ್ಥಿನಿ ಸಾವಿನ ಪ್ರಕರಣ : ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಅಮಾನತು
ಸಿಂಧನೂರು : ತಾಲ್ಲೂಕಿನ ಕುರಕುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಶ್ಯಾಮಪ್ಪ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಮುಖ್ಯ ಶಿಕ್ಷಕ ಪರಸಪ್ಪ ಮೈಲಾರಪ್ಪ ಚಲವಾದಿ ಅವರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಡಿ. ಬಡಗೇರ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿನಿ ತನುಶ್ರೀ ನೀರು ತರಲು ಹೋದ ವೇಳೆ ವಿದ್ಯುತ್ ತಗುಲಿ ಮೃತಪಟ್ಟಿದ್ದಳು. ಈ ಘಟನೆಯ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಡೆಸಿದ ಸ್ಥಳ ಪರಿಶೀಲನೆಯಲ್ಲಿ, ಶಾಲೆಯ ಮುಖ್ಯ ಶಿಕ್ಷಕ ಪರಸಪ್ಪ ಅವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯತನ ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆ ಕಾಪಾಡುವಲ್ಲಿ ವಿಫಲರಾಗಿರುವುದು ಗಂಭೀರವಾದ ಕರ್ತವ್ಯ ಲೋಪ ಎಂದು ಪರಿಗಣಿಸಿ, ಮುಖ್ಯ ಶಿಕ್ಷಕ ಪರಸಪ್ಪ ಚಲವಾದಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗದಂತೆ ಅವರಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ.