ಸಿಂಧನೂರು | ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಗಲಾಟೆ
ಜೆಡಿಎಸ್–ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ
ಸಿಂಧನೂರು: ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ತಾಲ್ಲೂಕಿನ ಬೂದಿವಾಳ ಕ್ಯಾಂಪ್ ಬಳಿ ನಡೆದ ರೈತರ ಪ್ರತಿಭಟನೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಜೆಡಿಎಸ್ ಯುವ ಮುಖಂಡ ಅಭಿಷೇಕ ನಾಡಗೌಡ, ಮೇಲ್ಭಾಗದ ರೈತರು ಹೆಚ್ಚಿನ ನೀರು ಬಳಸಿಕೊಳ್ಳುತ್ತಿರುವುದರಿಂದ ಸಿಂಧನೂರಿನ ವಿವಿಧ ಕಾಲುವೆಗಳಿಗೆ ಸಮರ್ಪಕ ನೀರು ತಲುಪುತ್ತಿಲ್ಲ ಎಂದು ಆರೋಪಿಸಿದರು. ರೈತರ ಸಮಸ್ಯೆ ಪರಿಹರಿಸಬೇಕಾದ ಜನಪ್ರತಿನಿಧಿಗಳೇ ರೈತರೊಂದಿಗೆ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜೋಳ ಬೆಳೆದ ರೈತರಿಗೆ ಇನ್ನೂ ಹಣ ಪಾವತಿಯಾಗಿಲ್ಲ ಎಂದು ಪ್ರಶ್ನಿಸಿದರು.
ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡ ವೀರಾರಾಜು, “ಜೋಳದ ಹಣ ಕುಮಾರಸ್ವಾಮಿ ಕೊಡಿಸಬೇಕು” ಎಂದು ಹೇಳಿದ ಬಳಿಕ ಅಭಿಷೇಕ ನಾಡಗೌಡ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಗಲಾಟೆಯ ವಾತಾವರಣ ನಿರ್ಮಾಣವಾಯಿತು.
ಸ್ಥಳಕ್ಕೆ ಆಗಮಿಸಿದ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮೌನೇಶ ರಾಠೋಡ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ನಂತರ ಮಾತನಾಡಿದ ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ರೈತರ ಸಮಸ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಎಲ್ಲರೂ ಒಗ್ಗಟ್ಟಾಗಿ ರೈತರಿಗೆ ನೀರು ಒದಗಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಘಟನೆಯಿಂದ ಅಸಮಾಧಾನಗೊಂಡ ರೈತರು, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮೊದಲು ನೀರಿನ ಸಮಸ್ಯೆ ಬಗೆಹರಿಸುವತ್ತ ಗಮನಹರಿಸಬೇಕು ಎಂದು ಮುಖಂಡರಿಗೆ ಮನವಿ ಮಾಡಿದರು.