ಸಿಂಧನೂರು : ಲಾರಿಯನ್ನು ಓವರ್‌ಟೇಕ್ ಮಾಡಲು ಮುಂದಾದಾಗ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬ್ಯಾಂಕ್ ಉದ್ಯೋಗಿಯೊಬ್ಬರು ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಿಂಧನೂರು–ಗಂಗಾವತಿ ರಸ್ತೆ ಮಾರ್ಗದಲ್ಲಿ ನಡೆದಿದೆ.

ಮೃತರನ್ನು ತಾಲ್ಲೂಕಿನ ಹುಡಾ ಗ್ರಾಮದ ಶಿವಶಂಕರ ಕರಿಯಪ್ಪ (33) ಎಂದು ಗುರುತಿಸಲಾಗಿದೆ. ಇವರು ಸಿಂಧನೂರಿನ ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು. ಎಂದಿನಂತೆ ಮಂಗಳವಾರ ಸಂಜೆ ಕೆಲಸ ಮುಗಿಸಿಕೊಂಡು ತಮ್ಮ ಸ್ನೇಹಿತ ಅಜಮೀರ್ ಪಾಷಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಹುಡಾ ಗ್ರಾಮಕ್ಕೆ ತೆರಳುತ್ತಿದ್ದರು.

ಗಂಗಾವತಿ ರಸ್ತೆ ಮಾರ್ಗದಲ್ಲಿ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್‌ಟೇಕ್ ಮಾಡಲು ಮುಂದಾದಾಗ ಬೈಕ್ ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಶಿವಶಂಕರ ಅವರು ರಸ್ತೆಗೆ ಬಿದ್ದು ಲಾರಿಯ ಚಕ್ರದಡಿ ಸಿಲುಕಿದ್ದಾರೆ. ಇದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಅಜ್ಮೀರ್ ಪಾಷಾ ಅವರ ಬಲಗಾಲಿನ ಮೂಳೆ ಮುರಿದಿದ್ದು, ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುವನ್ನು ಸಿಂಧನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸುವಾರ್ತಾ ಅವರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಬಾವಸಲಿ ರಾಯಚೂರು/ವಾರ್ತಾಭಾರತಿ

ರಾಯಚೂರು ಜಿಲ್ಲಾ ವರದಿಗಾರರು

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ