ರಾಯಚೂರಿನಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಆರಂಭ : ತಹಶೀಲ್ದಾರ್ ಸುರೇಶ ವರ್ಮಾ
ಸಾಂದರ್ಭಿಕ ಚಿತ್ರ
ರಾಯಚೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಂತ ಹಂತವಾಗಿ ನಡೆಯಲಿದೆ ಎಂದು 53 ಹಾಗೂ 54ನೇ ವಿಧಾನಸಭಾ ಕ್ಷೇತ್ರಗಳ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ ತಿಳಿಸಿದ್ದಾರೆ.
ಜನಗಣತಿಯ ಗೃಹಪಟ್ಟಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಆರ್ ಹಂತ-3ರ ವೇಳಾಪಟ್ಟಿ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ಸುಮಾರು 59,050 ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಸಂಗ್ರಹಿಸಲಿದ್ದು, 25,284 ಬೂತ್ ಮಟ್ಟದ ಏಜೆಂಟರು ಸಹಕರಿಸಲಿದ್ದಾರೆ.
ಜೂನ್ 20ರಿಂದ 29ರವರೆಗೆ ತರಬೇತಿ ಹಾಗೂ ಮುದ್ರಣ ಸಿದ್ಧತೆ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಸೆಪ್ಟೆಂಬರ್ 4ರವರೆಗೆ ಹಕ್ಕು ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 7ರಂದು ಪ್ರಕಟವಾಗಲಿದೆ.
ರಾಯಚೂರು ತಾಲ್ಲೂಕಿನ ಮತದಾರರು ಮನೆಗೆ ಭೇಟಿ ನೀಡುವ ಬಿಎಲ್‌ಒಗಳಿಗೆ ಸಹಕರಿಸಿ, ಮತದಾರರ ಪಟ್ಟಿಯಲ್ಲಿನ ತಮ್ಮ ಹೆಸರು, ವಿಳಾಸ ಸೇರಿದಂತೆ ಎಲ್ಲ ವಿವರಗಳನ್ನು ಪರಿಶೀಲಿಸಿಕೊಳ್ಳುವಂತೆ ತಹಶೀಲ್ದಾರ್ ಸುರೇಶ ವರ್ಮಾ ಮನವಿ ಮಾಡಿದ್ದಾರೆ.