Raichur | ಶಿಕ್ಷೆಗೆ ಗುರಿಯಾಗಿದ್ದ ಖೈದಿ ರಿಮ್ಸ್ ಆಸ್ಪತ್ರೆಯಲ್ಲಿ ಆತ್ಮಹತ್ಯೆ

Update: 2026-07-28 15:26 IST

ರಾಯಚೂರು : ರಾಯಚೂರಿನ ರಿಮ್ಸ್ ಆಸ್ಪತ್ರೆಯ ಖೈದಿಗಳ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷೆಗೆ ಗುರಿಯಾಗಿದ್ದ ಖೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ಹುಬ್ಬಳ್ಳಿ ಮೂಲದ 32 ವರ್ಷದ ಪವನ್ ಕುಮಾರ್, ಲಿಂಗಸುಗೂರು ತಾಲೂಕಿನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಶಿಕ್ಷೆಗೆ ಗುರಿಯಾಗಿದ್ದ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಜುಲೈ 22ರಂದು ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪವನ್ ಕುಮಾರ್‌ಗೆ ಟಿಬಿ ಹಾಗೂ ಅನ್ನನಾಳದಲ್ಲಿ ರಕ್ತಸ್ರಾವದ ಸಮಸ್ಯೆ ಇದ್ದು, ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

ಮಂಗಳವಾರ ಖೈದಿಗಳ ವಾರ್ಡ್‌ನ ಶೌಚಾಲಯಕ್ಕೆ ತೆರಳಿದ್ದ ಪವನ್ ಕುಮಾರ್ ಬಹಳ ಹೊತ್ತಾದರೂ ಹೊರಬರದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಅನುಮಾನ ಮೂಡಿದೆ. ಬಳಿಕ ಶೌಚಾಲಯವನ್ನು ಪರಿಶೀಲಿಸಿದಾಗ ಆತ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣವು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News