ಪ್ಯಾರಾಮೆಡಿಕಲ್ ವೈದ್ಯಕೀಯ ಕ್ಷೇತ್ರದಲ್ಲಿ ಅಭೂತಪೂರ್ವ ಸೇವೆ : ಎಂಎಲ್‌ಸಿ ವಸಂತಕುಮಾರ
ರಾಯಚೂರು: ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖ ಪಾತ್ರ ಪ್ಯಾರಾಮೆಡಿಕಲ್ ವೃತ್ತಿಪರರು ವಹಿಸುತ್ತಿದ್ದಾರೆ. ಸೂಕ್ತ ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ಸೇವೆಯಿಂದ ಜಗತ್ತಿನ ಗಮನ ಸೆಳೆದಿದ್ದಾರೆ. ಇವರ ಸೇವೆಯನ್ನು ಎರಡು ವೈದ್ಯರ ಸೇವೆಯಂತೆ ಪರಿಗಣಿಸಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಹೇಳಿದರು.
ನಗರದ ಪಂ. ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎಸ್.ಕೆ.ಇ. ಕಲ್ಯಾಣ ಕರ್ನಾಟಕ ಪ್ಯಾರಾಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುಗೆ ಹಾಗೂ ಆತ್ಮೀಯ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ಬಹುತೇಕ ಆಸ್ಪತ್ರೆಗಳಲ್ಲಿ ಎಸ್.ಕೆ.ಇ. ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಇದು ಸಂಸ್ಥೆಯ ಅಧ್ಯಕ್ಷರಾದ ಡಾ. ಬಾಬುರಾವ್ ಶೆಗುಣಿಸಿಯವರ ಶ್ರಮವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಅವರು ವಿದ್ಯಾರ್ಥಿಗಳಿಗೆ ಉತ್ತಮ ಶಿಸ್ತು ಮತ್ತು ತರಬೇತಿ ನೀಡುತ್ತಾ ಜೀವನ ಕಟ್ಟಿಕೊಳ್ಳಲು ಸಹಾಯ ಮಾಡುತ್ತಿರುವುದು ಶ್ಲಾಘನೀಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಆರೋಗ್ಯ ಕ್ಷೇತ್ರದಲ್ಲಿ ವೈದ್ಯಕೀಯ ವೃತ್ತಿಪರರಿಗೆ ಬೆಂಬಲ ನೀಡಲು ಮತ್ತು ರೋಗಿಗಳಿಗೆ ಅಗತ್ಯ ಕೌಶಲ್ಯಗಳನ್ನು ಒದಗಿಸಲು ಪ್ಯಾರಾಮೆಡಿಕಲ್ ಕೋರ್ಸ್‌ಗಳು ಅತ್ಯಂತ ಪರಿಣಾಮಕಾರಿ ಶೈಕ್ಷಣಿಕ ಕಾರ್ಯಕ್ರಮಗಳಾಗಿವೆ. ಲ್ಯಾಬ್ ಟೆಕ್ನಾಲಜಿ, ರೇಡಿಯಾಲಜಿ, ಆಪ್ಟೋಮೆಟ್ರಿ, ಡಯಾಲಿಸಿಸ್ ಇತ್ಯಾದಿ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ವೈದ್ಯಕೀಯ ಸೇವೆಯಲ್ಲಿ ವಿದ್ಯಾರ್ಥಿಗಳ ಸಹಕಾರವಿಲ್ಲದೆ ಕಾರ್ಯ ನಿರ್ವಹಿಸುವುದು ಕಷ್ಟ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ರಝಾಕ್ ಉಸ್ತಾದ ಮಅತನಾಡಿ, ಎಸ್.ಕೆ.ಇ. ಕಲ್ಯಾಣ ಕರ್ನಾಟಕ ಪ್ಯಾರಾಮೆಡಿಕಲ್ ಕಾಲೇಜಿನ ಅಧ್ಯಕ್ಷರಾದ ಡಾ. ಬಾಬುರಾವ್ ಶೆಗುಣಸಿ ವಿವಿಧ ರೀತಿಯ ತರಬೇತಿ ನೀಡುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ದೇಶ-ವಿದೇಶದಲ್ಲಿ ಸೇವೆ ಸಲ್ಲಿಸಲು ಸಿದ್ಧರಾಗುತ್ತಾರೆ. ರಾಯಚೂರು ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶೈಕ್ಷಣಿಕ ವಾತಾವರಣವನ್ನು ರೂಪಿಸಲಾಗಿದೆ. ಹಿಂದುಳಿದ ವಿದ್ಯಾರ್ಥಿಗಳಿಗೂ ಉನ್ನತ ಮಟ್ಟದ ಶಿಕ್ಷಣ ಪಡೆದು ಉತ್ತಮ ಜೀವನ ಕಟ್ಟಿಕೊಳ್ಳಲು ಎಲ್ಲರೂ ಶ್ರಮಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಅಸ್ಲಂ ಪಾಷಾ ಮಾತನಾಡಿದರು.
ಕಾಲೇಜಿನ ಅಧ್ಯಕ್ಷರಾದ ಡಾ.ಬಾಬುರಾವ ಪ್ರಾಸ್ತಾವಿಕವಾಗಿ ಶಿಕ್ಷಣ ಸಂಸ್ಥೆ ಬೆಳೆದು ಬಂದ ದಾರಿಯ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರೊ.ವೆಂಕಣ್ಣ, ಶರಣಪ್ಪ ಅಸ್ಕಿಹಾಳ, ಡಾ.ಭಾಸ್ಕರ ರೆಡ್ಡಿ, ಕಾಲೇಜಿನ ಉಪನ್ಯಾಸಕರು ಹಾಗೂ ಇತರರು ಉಪಸ್ಥಿತರಿದ್ದರು.