ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ : ಸಚಿವ ಯು.ಟಿ.ಖಾದರ್
ಶಿವಮೊಗ್ಗ : ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್ಡಿ) ಹರಡುವುದನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಗಳ ವಿಶೇಷ ವಾರ್ಡ್ಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ನಝೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೆಎಫ್ಡಿ ಹಾಟ್ಸ್ಪಾಟ್ಗಳನ್ನು ಗುರುತಿಸಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಂತರ್ಇಲಾಖಾ ಸಭೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಅಡಿಕೆ ತೋಟಗಳು, ಕೃಷಿ ಪ್ರದೇಶಗಳು ಹಾಗೂ ಅರಣ್ಯಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಮಂಗನ ಕಾಯಿಲೆ ಕುರಿತು ಅರಿವು ಮೂಡಿಸಬೇಕು. ಕಾಡು ಹಾಗೂ ತೋಟಗಳಿಗೆ ತೆರಳುವಾಗ ಉಣ್ಣೆಗಳಿಂದ ರಕ್ಷಣೆ ಪಡೆಯುವುದು, ಕೆಲಸ ಮುಗಿದ ಬಳಿಕ ಬಿಸಿನೀರಿನಲ್ಲಿ ಸ್ನಾನ ಮಾಡುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಬೇಕು. ಗ್ರಾಮಗಳಲ್ಲಿ ಮಂಗಗಳು ಮೃತಪಟ್ಟಿರುವುದು ಕಂಡುಬಂದರೆ ತಕ್ಷಣ ಆರೋಗ್ಯ ಅಥವಾ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಗ್ರಾಮ ಪಂಚಾಯತ್ ಕಾರ್ಯಪಡೆಗಳಿಗೆ ಸೂಚಿಸಲಾಗಿದೆ ಎಂದರು.
ಜ್ವರದ ಲಕ್ಷಣಗಳೊಂದಿಗೆ ಕೆಎಫ್ಡಿ ಶಂಕೆ ಕಂಡುಬಂದರೆ ತಕ್ಷಣ ರಕ್ತದ ಮಾದರಿ ಸಂಗ್ರಹಿಸಿ ಶಿವಮೊಗ್ಗದ ವೈರಾಣು ರೋಗ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟರೆ ತಾಲೂಕು ಆಸ್ಪತ್ರೆಗಳ ವಿಶೇಷ ವಾರ್ಡ್ಗಳಲ್ಲಿ ಚಿಕಿತ್ಸೆ ನೀಡಲಾಗುವುದು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಹೊಸನಗರ ತಾಲೂಕಿನ ದೂರದ ಗ್ರಾಮಗಳ ಜನರಿಗೆ ಅನುಕೂಲವಾಗುವಂತೆ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪಿಸಲು ಪ್ರಸ್ತಾವ ಸಲ್ಲಿಸಲಾಗಿದೆ. ಸುಮಾರು ನಾಲ್ಕರಿಂದ ಐದು ಎಕರೆ ಜಾಗ ಲಭ್ಯವಿದ್ದು, ಸುತ್ತಮುತ್ತಲಿನ 35 ಸಾವಿರ ಜನಸಂಖ್ಯೆಗೆ ಅನುಕೂಲವಾಗುವಂತೆ ಅಗತ್ಯ ಸಿಬ್ಬಂದಿ ಮತ್ತು ಮೂಲಸೌಕರ್ಯಗಳ ಕುರಿತು ಪ್ರಸ್ತಾವ ಕಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸೊರಬ ತಾಲೂಕು ಆಸ್ಪತ್ರೆಯಲ್ಲಿ 100 ಹಾಸಿಗೆಗಳ ವ್ಯವಸ್ಥೆಯಿದ್ದು, ಪ್ರತಿದಿನ 600ರಿಂದ 700 ಹೊರರೋಗಿಗಳು ಹಾಗೂ ಸುಮಾರು 50 ಒಳರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇಎನ್ಟಿ,ಅರಿವಳಿಕೆ ಮತ್ತು ಸ್ತ್ರೀರೋಗ ತಜ್ಞರ ಕೊರತೆಯಿಂದ ಸೇವೆಗಳಿಗೆ ಅಡಚಣೆಯಾಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ತಜ್ಞ ವೈದ್ಯರ ಕೊರತೆ ನೀಗಿಸುವುದು, ಅಗತ್ಯ ತರಬೇತಿ ನೀಡುವುದು ಹಾಗೂ ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸಚಿವರು ಸೂಚಿಸಿದರು.
ಸರಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ತಜ್ಞ ವೈದ್ಯರು, ಚಿಕಿತ್ಸಾ ಸೌಲಭ್ಯಗಳು ಮತ್ತು ಆರೋಗ್ಯ ಸೇವೆಗಳ ಕುರಿತು ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ತಲುಪಿಸಬೇಕು. ಮುಂದಿನ 15 ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ನಂತರದ 15 ದಿನಗಳ ಅಂತರದಲ್ಲಿ ಮತ್ತೊಂದು ಸುತ್ತಿನ ಅಭಿಯಾನ ನಡೆಸಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳಿದ್ದರೂ ಮಾಹಿತಿ ಕೊರತೆಯಿಂದ ಜನರು ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸುವಂತಾಗಬಾರದು ಎಂದು ಸಚಿವರು ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು, ಜಿಲ್ಲಾಧಿಕಾರಿ ಪ್ರಕಾಶ್ ಟಿ.ಜಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ಅಧಿಕ್ಷಕ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಡಿ.ಎಚ್.ಓ.ಕಾಂತರಾಜ್, ಆರೋಗ್ಯ ಇಲಾಖೆಯ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು, ವೈದ್ಯಾಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಉಪಸ್ಥಿತರಿದ್ದರು.
ನೂತನ ಜಿಲ್ಲಾಸ್ಪತ್ರೆ ಮಂಜೂರಾತಿಗೆ ಆಗ್ರಹ
ಜಿಲ್ಲೆಯ ಬಡ ರೋಗಿಗಳ ಆಶಾಕಿರಣವಾಗಿರುವ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಮತ್ತು ಔಷಧಿ ಅಲಭ್ಯತೆಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ತಕ್ಷಣವೇ ಆಸ್ಪತ್ರೆಯ ವ್ಯವಸ್ಥೆಯನ್ನು ಸರಿಪಡಿಸುವುದರ ಜೊತೆಗೆ ಶಿವಮೊಗ್ಗಕ್ಕೆ ಪ್ರತ್ಯೇಕ ನೂತನ ಜಿಲ್ಲಾ ಆಸ್ಪತ್ರೆಯನ್ನು ಮಂಜೂರು ಮಾಡಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪಒತ್ತಾಯಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ನಗರದ ಆರೋಗ್ಯ ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿರುವ ನುರಿತ ವೈದ್ಯರನ್ನು ಬೇರೆ ಕಡೆಗೆ ನಿಯೋಜನೆ ಮೇಲೆ ಕಳುಹಿಸಬಾರದು.ಮೆಗ್ಗಾನ್ ಆಸ್ಪತ್ರೆಯು ಜಿಲ್ಲಾ ಬೋಧನಾ ಆಸ್ಪತ್ರೆಯಾಗಿರುವುದರಿಂದ ಜಿಲ್ಲಾ ಆಸ್ಪತ್ರೆಯ ವಿಶೇಷ ಸೌಲಭ್ಯಗಳಿಂದ ವಂಚಿತವಾಗಿದೆ. ಹೀಗಾಗಿ ಪ್ರತ್ಯೇಕ ನೂತನ ಜಿಲ್ಲಾ ಆಸ್ಪತ್ರೆ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.
‘ಇಎಸ್ಐಗೆ ಪ್ರತ್ಯೇಕ ಕೌಂಟರ್ ಸ್ಥಾಪಿಸಿ’
ಜಿಲ್ಲೆಯಲ್ಲಿ ಸುಮಾರು 80 ಸಾವಿರ ಇಎಸ್ಐ ಕಾರ್ಡುದಾರರಿದ್ದು, ಅವರು ಮೆಗ್ಗಾನ್ ಆಸ್ಪತ್ರೆಗೆ ಬಂದಾಗ ಚಿಕಿತ್ಸೆಗಾಗಿ ಯಾರನ್ನು ಸಂಪರ್ಕಿಸಬೇಕು ಎಂಬ ಸ್ಪಷ್ಟ ಮಾಹಿತಿ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇಎಸ್ಐ ಫಲಾನುಭವಿಗಳಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಮೊದಲ ಆದ್ಯತೆಯ ಚಿಕಿತ್ಸೆ ದೊರೆಯುವಂತೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡುವುದನ್ನು ಕಡಿಮೆ ಮಾಡುವಂತೆ ನಿರ್ದೇಶನವಿದೆ. ಹೀಗಾಗಿ ಮೆಗ್ಗಾನ್ನಲ್ಲಿ ಇಎಸ್ಐ ಕಾರ್ಡುದಾರರಿಗಾಗಿ ಪ್ರತ್ಯೇಕ ಕೌಂಟರ್ ಸ್ಥಾಪಿಸಿ ಸೂಕ್ತ ಮಾರ್ಗದರ್ಶನ ಮತ್ತು ಚಿಕಿತ್ಸಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮನವಿ ಮಾಡಿದರು.
‘ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ’
ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ಡಿಎಚ್ಒ ಸೇರಿದಂತೆ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ನಕಲಿ ವೈದ್ಯರು ಕಾರ್ಯನಿರ್ವಹಿಸುತ್ತಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಬರಬೇಕು. ಮುಂದಿನ ದಿನಗಳಲ್ಲಿ ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಿದರು.