ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದಲ್ಲಿ ಜಮೀನಿನಲ್ಲಿ ಹುಲ್ಲು ಕೊಯ್ಯುವ ವೇಳೆ ನಾಗರಹಾವು ಕಡಿದು ಅಸ್ವಸ್ಥಗೊಂಡಿದ್ದ ರೈತರೊಬ್ಬರನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯವ ವಿಚಾರದಲ್ಲಿ 108 ಆಂಬುಲೆನ್ಸ್ ಸಿಬ್ಬಂದಿ ನಿರಾಕರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾಡಿಗೆರೆ ಗ್ರಾಮದ ರೈತ ಉಮೇಶ್ ಎಂಬವರಿಗೆ ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ನಾಗರಹಾವು ಕಚ್ಚಿದೆ ಎನ್ನಲಾಗಿದ್ದು, ತಕ್ಷಣ ಅವರನ್ನು ನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೊಸನಗರ ಆಸ್ಪತ್ರೆಗೆ ಕರೆತರಲಾಗಿದೆ.

ಉಮೇಶ್ ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ಹೊಸನಗರದಿಂದ ಶಿವಮೊಗ್ಗಕ್ಕೆ ರೆಫರ್ ಮಾಡಲಾಗಿದ್ದು, ಅವರನ್ನು ಶಿವಮೊಗ್ಗಕ್ಕೆ ಕರೆದೊಯ್ಯಲು 108 ಆಂಬುಲೆನ್ಸ್ ಸಿಬ್ಬಂದಿ ಆರಂಭದಲ್ಲಿ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ರೆಫರ್ ಮಾಡಲಾದ ರೋಗಿಯನ್ನು ಕರೆದೊಯ್ಯುವ ಕುರಿತು 108 ಸೇವೆಯಲ್ಲಿರುವ ನಿಯಮದ ಕಾರಣದಿಂದ ತಾವು ಕರೆದೊಯ್ಯಲು ಸಾಧ್ಯವಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ನಗರದಿಂದಲೇ ರೈತನೊಂದಿಗೆ ಬಂದ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಮತ್ತು ನಗರ ನಿತಿನ್ ಸೇರಿದಂತೆ ಆಸ್ಪತ್ರೆ ಆವರಣದಲ್ಲಿದ್ದ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂತರ ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಉಮೇಶ್ ಅವರನ್ನು 108 ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ.

ಹಾವು ಕಡಿತದಂತಹ ತುರ್ತು ಪರಿಸ್ಥಿತಿಯಲ್ಲಿ ರೋಗಿಯನ್ನು ಸೂಕ್ತ ಸಮಯದಲ್ಲಿ ಹೆಚ್ಚಿನ ಚಿಕಿತ್ಸೆಗೆ ರವಾನಿಸುವ ವ್ಯವಸ್ಥೆ ಕುರಿತು ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳು ಮೂಡಿದ್ದು, 108 ಸೇವೆಯ ನಿಯಮಗಳ ಬಗ್ಗೆ ಸ್ಪಷ್ಟತೆ ನೀಡಬೇಕೆಂಬ ಆಗ್ರಹವೂ ಕೇಳಿಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor