ಶಿವಮೊಗ್ಗ | ಕೆಎಸ್ಸಾರ್ಟಿಸಿ ಬಸ್-ಕಾರು ಮುಖಾಮುಖಿ ಢಿಕ್ಕಿ : ಮೃತರ ಸಂಖ್ಯೆ 4ಕ್ಕೆ ಏರಿಕೆ
ತೀರ್ಥಹಳ್ಳಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ತೀರ್ಥಹಳ್ಳಿ ತಾಲೂಕು ಭಾರತಿಪುರದ ಬಳಿ ಮಂಗಳವಾರ ರಾತ್ರಿ 10 ಗಂಟೆಗೆ ಈ ಅಪಘಾತ ಸಂಭವಿಸಿದೆ.
ತೀರ್ಥಹಳ್ಳಿ ಕಡೆಯಿಂದ ರಾಯಚೂರಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ದಾವಣಗೆರೆ ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಮಾರ್ಗವಾಗಿ ಶೃಂಗೇರಿ ಕಡೆ ಹೊರಟಿದ್ದ ಕಾರಿನ ನಡುವೆ ಢಿಕ್ಕಿಯಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡ ಓರ್ವ ಮಹಿಳೆ ಹಾಗೂ ಚಾಲಕರನ್ನು ಪಟ್ಟಣದ ಜೆ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದವರು ಶೃಂಗೇರಿ ಮೂಲದ ಮೆಣಸೆಯವರಾಗಿದ್ದು, ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದ ಮದುವೆಯಲ್ಲಿ ಭಾಗಿಯಾಗಿ ಶೃಂಗೇರಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.