ಶಿವಮೊಗ್ಗ | ಕೆಎಸ್ಸಾರ್ಟಿಸಿ ಬಸ್-ಕಾರು ಮುಖಾಮುಖಿ ಢಿಕ್ಕಿ : ಒಂದೇ ಕುಟುಂಬದ ಮೂವರು ಮೃತ್ಯು
ಶಿವಮೊಗ್ಗ: ಕೆಎಸ್ಸಾರ್ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಬುಧವಾರ ನಡೆದಿದೆ.
ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳಾದ ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮೂಲಗಳ ಮಾಹಿತಿ ಪ್ರಕಾರ, ಕಾರಿನಲ್ಲಿ ಒಂದೇ ಕುಟುಂಬದ ಆರು ಮಂದಿ ಪ್ರಯಾಣಿಸುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದ ತಕ್ಷಣ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.