ಶಿವಮೊಗ್ಗ | ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ
ಸಾಂದರ್ಭಿಕ ಚಿತ್ರ | PC : freepik.com
ಶಿವಮೊಗ್ಗ : ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಸಂಬಂಧ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕನನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡಿದ ಸಂಬಂಧ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ಡಾ.ಅಶ್ವಿನ್ ಹೆಬ್ಬಾರ್ ಎಂಬಾತನ ವಿರುದ್ಧ ವಿದ್ಯಾರ್ಥಿನಿ ಶಿವಮೊಗ್ಗ ಮಹಿಳಾ ಠಾಣೆಗೆ ದೂರು ನೀಡಿದ್ದರು. ಆದರೆ, ಪ್ರಕರಣ ದಾಖಲಾದ ನಂತರ ವೈದ್ಯ ತಲೆಮರೆಸಿಕೊಂಡಿದ್ದ.
ಇದೇ ವೇಳೆ ಡಾ. ಅಶ್ವಿನ್ ಹೆಬ್ಬಾರ್‌ನನ್ನು ಬಂಧಿಸಬೇಕು ಮತ್ತು ಅಮಾನತುಗೊಳಿಸಬೇಕು ಎಂದು ಲಾಯರ್ಸ್ ಗೀಲ್ಡ್ ಸರಕಾರಕ್ಕೆ ಒತ್ತಾಯಿಸಿತ್ತು. ಅಲ್ಲದೆ ವೈದ್ಯ ವಿದ್ಯಾರ್ಥಿಗಳೂ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಯನ್ನೂ ನಡೆಸಿದ್ದರು.
ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮಹಿಳಾ ಠಾಣೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಂಧಿಸಿ ಶಿವಮೊಗ್ಗಕ್ಕೆ ಶುಕ್ರವಾರ ಕರೆ ತಂದಿದ್ದರು. ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.