×
Ad

ಸಿಗಂದೂರು ಸೇತುವೆ ಉದ್ಘಾಟನೆ | ಕಾರ್ಯಕ್ರಮದಿಂದ ದೂರ ಉಳಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್‌ ನಾಯಕರು

Update: 2025-07-14 13:25 IST

ಶಿವಮೊಗ್ಗ : ರಾಜ್ಯದ ಅತಿದೊಡ್ಡ ಹಾಗೂ ದೇಶದ ಎರನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿರುವ ಸಿಗಂದೂರು ಬ್ರಿಡ್ಜ್ ಲೋಕಾರ್ಪಣೆ ವಿಚಾರವಾಗಿ ಉಂಟಾಗಿರುವ ರಾಜಕೀಯ ವಿವಾದ ಈಗ ಮತ್ತಷ್ಟು ಜೋರಾಗುತ್ತಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ತಮ್ಮನ್ನು ವಿಳಂಬವಾಗಿ ಆಹ್ವಾನಿಸಲಾಗಿದ್ದು, ಪೂರ್ವನಿಗದಿತ ಕಾರ್ಯಕ್ರಮದ ಕಾರಣ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ದಿನಾಂಕ ಮುಂದೂಡಿ ಎಂದು ಮನವಿ ಮಾಡಿದ್ದರು. ಆದರೆ, ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿಲ್ಲ.

ಅಲ್ಲದೆ, ಈ ಸಂಬಂಧ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ" ಎಂದು ಸ್ಪಷ್ಟಪಡಿಸಿದ್ದರು.

ಈ ಬೆನ್ನಲ್ಲೇ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ‌, ಸಚಿವ ಮಧು ಬಂಗಾರಪ್ಪ, ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಸ್ಥಳೀಯ ಕಾಂಗ್ರೆಸ್‌ ನಾಯಕರೂ ಕೂಡ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

ಸಿಗಂದೂರು ಬ್ರಿಡ್ಜ್ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಭಾಗವಹಿಸಲೆಂದು ಸಚಿವ ಸತೀಶ್‌ ಜಾರಕಿಹೊಳಿ‌ ಸಾಗರಕ್ಕೆ ತೆರಳಿದ್ದರು. ಆದರೆ, ಕಾರ್ಯಕ್ರಮದಲ್ಲಿ ಶಿಷ್ಠಾಚಾರ ಪಾಲನೆ ಆಗಿಲ್ಲ ಎಂದು ಆರೋಪಿಸಿ, ವಾಪಾಸ್‌ ಆಗಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, "ಕಾರ್ಯಕ್ರಮದ ಆಯೋಜನೆ ಮತ್ತು ಆಹ್ವಾನದಲ್ಲಿ‌ ಲೋಪ ಆಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ನಿನ್ನೆ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಸೇತುವೆ ನಿರ್ಮಾಣದ ಹಿಂದೆ ರಾಜ್ಯ ಸರಕಾರದ ಪಾತ್ರವೂ ಇದೆ. ಜಾಗದ ಅನುಮತಿ ಸೇರಿದಂತೆ ಬೇರೆ ಬೇರೆ ವಿಷಯದಲ್ಲಿ ರಾಜ್ಯ ಸರಕಾರದ ಕೊಡುಗೆ ಇದೆ. ಹೀಗಿದ್ದೂ ಕಾರ್ಯಕ್ರಮದ ಆಹ್ವಾನ ನೀಡುವುದರಲ್ಲಿ ಲೋಪ ಆಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ನಾನು ಸ್ಥಳೀಯ ಶಾಸಕರೊಂದಿಗೆ ಚರ್ಚೆ ಮಾಡುತ್ತೇನೆ. ಸ್ಥಳೀಯ ಶಾಸಕರಿಗೂ ತಡವಾಗಿ ಆಹ್ವಾನ ನೀಡಲಾಗಿದೆ ಎಂಬ ಮಾಹಿತಿ ಇದೆ" ಎಂದ ಎಂದು ಹೇಳಿದರು.

ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, "ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯನ್ನು ಕಡೆಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮ ಬಹಿಷ್ಕರಿಸುತ್ತೇವೆ. ಈ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕ್ರಮವನ್ನಾಗಿ ಮಾಡಲು ಹೊರಟಿದ್ದಾರೆ. ಮನೆಮನೆಗೂ ಕರ ಪತ್ರ ಹಂಚಿದ್ದಾರೆ.ಇಡೀ ವೇದಿಕೆಯನ್ನು ಬಿಜೆಪಿ ಮಯ ಮಾಡಲು ಹೊರಟಿದ್ದಾರೆ. ಹಾಗಾಗಿ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ. ಬಿಜೆಪಿಗರು ಎಷ್ಟೇ ಮಾಡಿದರೂ ಸಿಗಂದೂರು ಭಾಗದ ಜನರು ನನಗೆ ಮತ ನೀಡಿದ್ದಾರೆ. ಆ ಭಾಗದ ಜನರಿಗೆ ಸೇತುವೆ ನಿರ್ಮಾಣಕ್ಕೆ ನಾನು ನಡೆಸಿದ ಹೋರಾಟದ ಬಗ್ಗೆ ಅರಿವು ಇದೆ" ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು, ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಅಧ್ಯಕ್ಷರಾಗಿರುವ ಮಧುಬಂಗಾರಪ್ಪನವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ಕರೆದ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಭಾಗಿಯಾಗುವ ಉದ್ದೇಶದಿಂದ ಕಾರ್ಯಕ್ರಮದಿಂದ ದೂರು ಉಳಿದಿದ್ದಾರೆಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News