×
Ad

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿದ್ದರಾಮಯ್ಯ

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬೆಳೆ ಹಾನಿ‌ ಸಭೆ, ಬೆಳೆ ಹಾನಿ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ

Update: 2025-09-17 14:25 IST

ಕಲಬುರಗಿ: ಸೆ 17: ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲಬುರಗಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಮಾಹಿತಿ ಪಡೆದು, ಜಂಟಿ ಸಮೀಕ್ಷೆ ನಡೆದಿರುವ ಪ್ರಮಾಣದ ಬಗ್ಗೆ ಮಾಹಿತಿ ಪಡೆದ ಬಳಿಕ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಲಹೆ ಸೂಚನೆಗಳನ್ನು ನೀಡಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಜಯ್ ಸಿಂಗ್ ಅವರು ಪರಿಸ್ಥಿತಿಯನ್ನು ವಿವರಿಸಿ, "ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಮಾನವ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು ಎಲ್ಲಾ ಪರಿಹಾರ ನೀಡಲಾಗಿದೆ. ಜಾನುವಾರು ಪ್ರಾಣ ಹಾನಿ ಬಗ್ಗೆ 175 ಪ್ರಕರಣಗಳು ವರದಿಯಾಗಿದ್ದು, ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಗಳಲ್ಲೂ ಪರಿಹಾರ ನೀಡಲಾಗಿದೆ ಎಂದರು.

ಬೀದರ್, ಕಲ್ಬುರ್ಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.‌

ನಿರಂತರ ಜೋರು ಮಳೆ ಇರುವುದರಿಂದ ಬೆಳೆ ಹಾನಿಯ ಸಂಪೂರ್ಣ ಜಂಟಿ ಸಮೀಕ್ಷೆಗೆ ಅಡ್ಡಿಯಾಗುತ್ತಿದೆ. ಹೀಗಾಗಿ ನಿಗದಿತ ಅವಧಿಯೊಳಗೆ ಜಂಟಿ ಸಮೀಕ್ಷೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಮಳೆ ನಿಂತ ಬಳಿಕ ಎಂಟತ್ತು ದಿನಗಳ ಹೆಚ್ಚುವರಿ ಅಗತ್ಯ ಬೀಳಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಸದ್ಯ ಡ್ರೋನ್ ಕ್ಯಾಮರಾ ಮೂಲಕ ಮಾಡಿರುವ ಬೆಳೆ ಹಾನಿ ವಿಡಿಯೊವನ್ನು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ತೋರಿಸಿ ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News