ದಾವಣಗೆರೆಯ ಆರ್ಥಿಕ, ಶೈಕ್ಷಣಿಕ ಬೆಳವಣಿಗೆಗೆ ಶಾಮನೂರು ಕಾರಣ : ಸಿಎಂ ಸಿದ್ದರಾಮಯ್ಯ
ಶಾಮನೂರು ಶಿವಶಂಕರಪ್ಪಗೆ ವಿಧಾನಸಭೆಯಲ್ಲಿ ಸಂತಾಪ: ಸದನ ನಾಳೆಗೆ ಮುಂದೂಡಿಕೆ
ಬೆಳಗಾವಿ : ‘ದಾವಣಗೆರೆ ಜಿಲ್ಲೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹಿರಿಯ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ಅವರು ಪ್ರಮುಖ ಕಾರಣ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಮರಿಸಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಮಂಡಿಸಿದ ಸಂತಾಪ ಸೂಚನೆ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೆ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಲೋಕಸಭಾ ಸದಸ್ಯರಾಗಿದ್ದರು. ಸುದೀರ್ಘ ಕಾಲ ರಾಜಕೀಯದಲ್ಲಿದ್ದರು ಎಂದು ನೆನಪು ಮಾಡಿಕೊಂಡರು.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ನಂತರ ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಸೇರಿದಂತೆ ಅನೇಕ ಸಂಸ್ಥೆಗಳನ್ನು ಕಟ್ಟಿ ಜಿಲ್ಲೆಯನ್ನು ವಿದ್ಯಾಕಾಶಿಯಾನ್ನಾಗಿ ಮಾಡಿದರು. ಉದ್ಯಮಿಯಾಗಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದು ನುಡಿದರು.
ದಾವಣಗೆರೆಗೆ ಬ್ರಾಂಡ್ ಹೆಸರು ತಂದು ಕೊಟ್ಟರು:
ಜಿಲ್ಲೆಯ ಜವಳಿ ಕ್ಷೇತ್ರದ ಅವನತಿ ಪ್ರಾರಂಭವಾದಾಗ ದಾವಣಗೆರೆಗೆ ಒಂದು ಬ್ರಾಂಡ್ ಹೆಸರನ್ನು ಶಾಮನೂರರು ತಂದುಕೊಟ್ಟರು. ದೀರ್ಘಕಾಲ ಎಐಸಿಸಿ ಖಜಾಂಚಿಯೂ ಆಗಿದ್ದರು. ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಅತಿಥಿ ಗೃಹದಲ್ಲೇ ನಾನು ಉಳಿಯುತ್ತಿದ್ದು, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟಕ್ಕೆ ಆಹ್ವಾನಿಸುತ್ತಿದ್ದರು ಎಂದು ಅವರು ಸ್ಮರಿಸಿದರು.
ನೆರವಿನ ಹಸ್ತ ಚಾಚುತ್ತಿದ್ದರು:
ಶಾಮನೂರು ಅವರು ಯಾರೇ ಕಷ್ಟದಲ್ಲಿದ್ದ ಸಂದರ್ಭದಲ್ಲಿ ಸಹಾಯದ ಹಸ್ತ ಚಾಚುತ್ತಿದ್ದರು. ಕೋವಿಡ್ ಸೋಂಕಿನ ಸಂದರ್ಭದಲ್ಲಿ ಆರು ಕೋಟಿ ರೂಪಾಯಿಗಳಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಪೂರೈಕೆ ಮಾಡಿದ್ದರು. ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಂಪುಟದಲ್ಲಿ ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ನಮ್ಮ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ಅಜಾತಶತ್ರು :
ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಶಾಮನೂರು ಶಿವಶಂಕರಪ್ಪ ದಾವಣಗೆರೆ ನಗರಸಭೆ ಸದಸ್ಯರಾಗುವ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆಯಂತೆ ಬಾಪೂಜಿ ವಿದ್ಯಾ ಸಂಸ್ಥೆಗಳು, ದಾವಣಗೆರೆಯ ಅಂಗವಿಕಲರ ಆಶಾ ಕಿರಣ ಟ್ರಸ್ಟ್, ಕ್ರಿಕೆಟ್ ಕ್ಲಬ್,ಸ್ಪೋರ್ಟಾ ಕ್ಲಬ್ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುವ ಮೂಲಕ ಸಮಾಜದ ಎಲ್ಲ ರಂಗಗಳಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಶಿವಶಂಕರಪ್ಪ ಅವರು ಅಪರಿಮಿತ ಜೀವನೋತ್ಸಾಹ, ತಾವು ನಂಬಿದ ಜನರ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿಯನ್ನು ಹೊಂದಿದ್ದರು ಎಂದು ಅವರು ನುಡಿದರು.
ಶಾಮನೂರು ಶಿವಶಂಕರಪ್ಪ ಅವರು ಒಬ್ಬ ವ್ಯಕ್ತಿಯಾಗಿರದೆ ರಾಜಕಾರಣ, ಶಿಕ್ಷಣ, ಸಾಹಿತ್ಯ, ಆರೋಗ್ಯ, ಅಭಿವೃದ್ಧಿ, ಶಕ್ತಿ ಹೀಗೆ ಎಲ್ಲ ಅಪೂರ್ವ ಗುಣಗಳ ಸಂಗಮವಾಗಿದ್ದರು. ದಾವಣಗೆರೆಯಲ್ಲಿ ಜವಳಿ ಗಿರಣಿಗಳ ಅವನತಿ ಉಂಟಾದಾಗ ಆ ಊರಿಗೆ ಒಂದು ಪ್ರಖ್ಯಾತಿಯನ್ನೆ ತಂದುಕೊಡುವುದರಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. 1994ರಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿ ಮೊದಲ ಬಾರಿಗೆ ಹತ್ತನೆ ವಿಧಾನಸಭೆ ಪ್ರವೇಶಿಸಿದ್ದ ಶಾಮನೂರು, 12ನೆ ವಿಧಾನಸಭೆಗೆ ಅದೇ ಕ್ಷೇತ್ರದಿಂದ ಪುನರಾಯ್ಕೆಗೊಂಡಿದ್ದರು ಎಂದು ಅವರು ತಿಳಿಸಿದರು.
ಆನಂತರ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ 13, 14, 15 ಹಾಗೂ16ನೇ ವಿಧಾನಸಭೆಗೆ ಸತತವಾಗಿ ಆಯ್ಕೆಗೊಂಡಿದ್ದರು. ಈ ಹಿಂದೆ 2013-16ರ ಅವಧಿಯಲ್ಲಿ ಕೃಷಿ ಮಾರುಕಟ್ಟೆ ಮತ್ತು ತೋಟಗಾರಿಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶಾಮನೂರು ಶಿವಶಂಕರಪ್ಪ ಅವರು, 1998ರಲ್ಲಿ 12ನೇ ಲೋಕಸಭೆಯ ಸದಸ್ಯರಾಗಿಯೂ ಸಹಸಲ್ಲಿಸಿದ್ದಾರೆ. ಕುವೆಂಪು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆದಿದ್ದ ಅವರು, ಯಾರೊಂದಿಗೂ ವೈರತ್ವ ಸಾಧಿಸದೆ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ಅಜಾತಶತ್ರು ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಮಾಡಿ, ಬಳಿಕ ವಿಧಾನಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.