ನಾಳೆ ದಕ್ಷಿಣ ಕನ್ನಡ ಸೇರಿದಂತೆ 5 ಜಿಲ್ಲೆಗಳ ಶಾಸಕರು, ಸಚಿವರೊಂದಿಗೆ ಮುಖ್ಯಮಂತ್ರಿ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆ.17: ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ(ಆನೇಕಲ್ ಸೇರಿದಂತೆ), ಕೋಲಾರ, ಬೆಂಗಳೂರು ದಕ್ಷಿಣ(ರಾಮನಗರ) ಹಾಗೂ ಮಂಡ್ಯ ಜಿಲ್ಲೆಯ ಶಾಸಕರು, ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ಸಭೆಗಳಲ್ಲಿ ಶಾಸಕರಿಗೆ ಒದಗಿಸಲಾಗಿರುವ ತಲಾ 50 ಕೋಟಿ ರೂ.ಗಳ ವಿಶೇಷ ಅನುದಾನ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಕಾಮಗಾರಿಗಳಿಗೆ ಮೀಸಲಿರಿಸಿರುವ ಅನುದಾನ, ಶಾಸಕರ ವಿವೇಚನ ಕೋಟ ಸೇರಿದಂತೆ ಹಲವು ವಿಷಯಗಳ ಕುರಿತು ಮುಖ್ಯಮಂತ್ರಿ ಚರ್ಚೆ ನಡೆಸಲಿದ್ದಾರೆ.
ಕ್ಷೇತ್ರಗಳಲ್ಲಿ ಈಗಾಗಲೆ ಚಾಲ್ತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳು, ಅನುದಾನ ಹಂಚಿಕೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಹಣಕಾಸು ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಿದ್ದರಾಮಯ್ಯ ಚರ್ಚೆ ಮಾಡಲಿದ್ದಾರೆ.