108 ಆ್ಯಂಬುಲೆನ್ಸ್ ನಿರ್ವಹಣೆಗೆ ‘ರಾಜ್ಯ ಕಮಾಂಡ್ ಕಂಟ್ರೋಲ್ ಸೆಂಟರ್’ ತೆರೆಯಲು ನಿರ್ಧಾರ
ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ 108ರ ಅಧೀನದಲ್ಲಿ ಬರುವ ಒಟ್ಟು 715 ಆ್ಯಂಬುಲೆನ್ಸ್‌ಗಳ ನಿರ್ವಹಣೆಗಾಗಿ ರಾಜ್ಯಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಶುಕ್ರವಾರ ಪ್ರಕಟನೆ ಹೊರಡಿಸಿರುವ ಅವರು, ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲು 112 ಎನ್‍ಜಿ-ಇಆರ್‌ಎಸ್‍ಎಸ್ ತಂತ್ರಾಂಶ ಬಳಿಸಿಕೊಳ್ಳಲಾಗುವುದು. ಹಾಗೆಯೇ ಜಿಲ್ಲಾಡಳಿತದ ಮುಖಾಂತರ ಆ್ಯಂಬುಲೆನ್ಸ್ ಗಳ ನಿರ್ವಹಣೆಯನ್ನು ವಿಕೇಂದ್ರೀಕರಣ ಮಾಡಲು ಪ್ರತಿ ಜಿಲ್ಲೆಗಳಲ್ಲಿಯೂ ಕಂಟ್ರೋಲ್ ಸೆಂಟರ್‌ಗಳು ಕಾರ್ಯನಿರ್ವಹಿಸಲಿದೆ. ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನಿರ್ವಹಣೆಯ ಜವಾಬ್ದಾರಿ ವಹಿಸಲಾಗಿದೆ ಎಂದು ಹೇಳಿದ್ದಾರೆ.
ಆ್ಯಂಬುಲೆನ್ಸ್‌ಗಳಿಗೆ ಚಾಲಕರು ಹಾಗೂ ನರ್ಸ್ ಸಿಬ್ಬಂದಿಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಹೊರಗುತ್ತಿಗೆಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಆರಂಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೇ 108 ಆ್ಯಂಬುಲೆನ್ಸ್ ಹೊರತಾಗಿ ರಾಜ್ಯದಲ್ಲಿರುವ 1000ಕ್ಕೂ ಹೆಚ್ಚು ಸ್ಟೇಟ್ ಆ್ಯಂಬುಲೆನ್ಸ್ ಗಳನ್ನು 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಇನ್ನು ಆ್ಯಂಬುಲೆನ್ಸ್ ಗಳನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ, ಆರೋಗ್ಯ ಇಲಾಖೆಯಿಂದ ನಿರ್ವಹಣೆ ಮಾಡುವ ಪ್ರಸ್ತಾವಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಈ ಕ್ರಮದಿಂದಾಗಿ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ಸರಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ.ಗಳಷ್ಟು ಉಳಿತಾಯವಾಗಲಿದೆ ಎಂದು ಅವರು ಸಚಿವರು ತಿಳಿಸಿದ್ದಾರೆ.