ಬೆಂಗಳೂರು ರಸ್ತೆ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. : ಸಚಿವ ಕೃಷ್ಣಭೈರೇಗೌಡ
ಬೆಂಗಳೂರು : ಬೆಂಗಳೂರು ನಗರದಲ್ಲಿ ಹದಗೆಟ್ಟಿರುವ ವಾರ್ಡ್ ರಸ್ತೆಗಳನ್ನು ಅಭಿವೃದ್ಧಿಪಡಿಸಲು 2 ಸಾವಿರ ಕೋಟಿ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಗುರುವಾರ ನಗರದ ಜಿಬಿಎ ಕೇಂದ್ರ ಕಚೇರಿಯಲ್ಲಿ ವಿವಿಧ ಪಾಲಿಕೆಗಳ ಅಧಿಕಾರಿಗಳೊಂದಿಗೆ ಘನತ್ಯಾಜ್ಯ ನಿರ್ವಹಣೆ ಕುರಿತು ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ಹಾಳಾಗಿರುವ ವಾರ್ಡ್ ರಸ್ತೆಗಳನ್ನು ಗುರುತಿಸಿ ಅಲ್ಪಾವಧಿಯ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಹೊಸ ಸರಕಾರ ಅಧಿಕಾರ ಸ್ವೀಕರಿಸಿದ ನಂತರ ಜನರ ನಿರೀಕ್ಷೆಗಳು ಸಾಕಷ್ಟಿದ್ದು, ಅವರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಲು ಸರಕಾರ ಹಲವು ಯೋಜನೆಗಳನ್ನು ರೂಪಿಸಿಕೊಂಡಿದೆ. ಅದರಂತೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರಮುಖ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಅದನ್ನು ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ರಸ್ತೆಗಳ ಪರಿಸ್ಥಿತಿಯನ್ನು ಸುಧಾರಿಸಬೇಕೆಂಬುದು ಜನರ ಪ್ರಮುಖ ನಿರೀಕ್ಷೆಯಾಗಿದೆ. ಈ ನಿಟ್ಟಿನಲ್ಲಿ ಹದಗೆಟ್ಟಿರುವ ವಾರ್ಡ್ ರಸ್ತೆಗಳನ್ನು ಅಭಿವೃದ್ಧಿಪಡಿಸಲು 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹಾಳಾಗಿರುವ ವಾರ್ಡ್ ರಸ್ತೆಗಳನ್ನು ಗುರುತಿಸಿ, ಅವುಗಳಿಗೆ ಹೊಸದಾಗಿ ಡಾಂಬರೀಕರಣ ಮಾಡಲು ಅಂದಾಜು ಪಟ್ಟಿ ತಯಾರಿಸಿ, ಅಲ್ಪಾವಧಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕೂಡಲೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸರಕಾರದಿಂದ ಇಂದು ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.
ಜಿಬಿಎ ಮುಖ್ಯ ಆಯುಕ್ತರು ಹಾಗೂ 5 ನಗರ ಪಾಲಿಕೆಗಳ ಆಯುಕ್ತರು ತಮ್ಮ ವ್ಯಾಪ್ತಿಯ ಹದಗೆಟ್ಟಿರುವ ರಸ್ತೆಗಳನ್ನು ಪಟ್ಟಿ ಮಾಡಬೇಕು. ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಆರಂಭಿಸಬೇಕು. ಎಲ್ಲ ಅಧಿಕಾರಿಗಳು ಆದ್ಯತೆ ಮೇರೆಗೆ ಕೆಲಸ ಪ್ರಾರಂಭಿಸಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ವಾರ್ಡ್ ರಸ್ತೆಗಳ ಅಂದಾಜು ಹಾಗೂ ಟೆಂಡರ್ ಪ್ರಕ್ರಿಯೆಯನ್ನು ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳಿಸಿ, ನಾಲ್ಕರಿಂದ ಆರು ತಿಂಗಳ ಅವಧಿಯಲ್ಲಿ ಕಾಮಗಾರಿಗಳನ್ನು ಮುಗಿಸುವ ಗುರಿ ಹೊಂದಿದ್ದೇವೆ. ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು, ಗುಣಮಟ್ಟಕ್ಕೆ ಯಾವುದೇ ಧಕ್ಕೆಯಾಗದಂತೆ ಮಳೆ ಇಲ್ಲದ ಅವಧಿಯಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದ ಅವರು, ಪ್ರಮಾಣಿತ ಕಾರ್ಯವಿಧಾನ ಅನುಸಾರ ಸಂಬಂಧಿತ ಎಲ್ಲ ಅಂಗಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುವುದು. ಪೂರ್ವಾನುಮತಿ ಇಲ್ಲದೆ ರಸ್ತೆಗಳನ್ನು ಅಗೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಓ ಕರೀಗೌಡ ಸೇರಿದಂತೆ ಪ್ರಮುಖರಿದ್ದರು.