19 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ
ಮಧು ಬಂಗಾರಪ್ಪ
ಬೆಂಗಳೂರು : ಸರಕಾರಿ ಶಾಲೆಗಳಿಗೆ ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಸೇರಿದಂತೆ ಒಟ್ಟಾರೆ 19 ಸಾವಿರ ಶಿಕ್ಷಕರ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶುಕ್ರವಾರ ಇಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ಅಧಿಕಾರ ವಹಿಸಿದ ನಂತರ 13,500 ಶಿಕ್ಷಕರ ನೇಮಿಸಲಾಯಿತು. ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಅಧ್ಯಯನ ಸಂಬಂಧ ರಚಿಸಿರುವ ನಿವೃತ್ತ ನ್ಯಾ.ನಾಗಮೋಹನ್ ದಾಸ್ ಸಮಿತಿಯು ವರದಿ ಸಲ್ಲಿಸಿದ ಬಳಿಕ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದರು.
ರಾಜ್ಯದಲ್ಲಿ 5 ಸಾವಿರ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಗುರಿ ಹೊಂದಿದ್ದೇವೆ. ಕೆಪಿಎಸ್ ಶಾಲೆಗಳನ್ನು ಆರಂಭಿಸುತ್ತೇವೆ. ಈ ಶೈಕ್ಷಣಿಕ ವರ್ಷದ ಆರಂಭದಿಂದಲೇ ವಿದ್ಯಾರ್ಥಿಗಳ ಕಲಿಕೆಗೆ ಒತ್ತು ನೀಡುತ್ತಿದ್ದು, ಓದು ಕರ್ನಾಟಕ, ಕಲಿಕಾ ದೀಪ, ಗಣಕ ಗಣಿತ, ಕಲಿಕಾ ಚಿಲುಮೆ ಕಾರ್ಯಕ್ರಮಗಳನ್ನು ಜಾರಿ ತರುವಂತೆ ಸೂಚಿಸಲಾಗಿದೆ. ಹತ್ತನೇ ತರಗತಿಯಲ್ಲಿ ಆನ್‍ಲೈನ್ ಶಿಕ್ಷಣಕ್ಕೆ ಕ್ರಮ ಕೈಗೊಳ್ಳಲಾಗುವುದು. ನಮ್ಮ ಸ್ಟುಡಿಯೋಗಳಲ್ಲಿ ಚಿತ್ರಿಕರಣ ನಡೆಸಿ, ಆ ಪಠ್ಯಗಳನ್ನು ಶಾಲೆಗಳಲ್ಲಿ ಭಿತ್ತರಿಸಲಾಗುವುದು ಎಂದು ತಿಳಿಸಿದರು.