ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ: ಪ್ರಮುಖ ಆರೋಪಿ ಬಂಧನ
ಬೆಂಗಳೂರು, ಆ.9- ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಕೆಆರ್ ಪುರಂ ನಿವಾಸಿ ಪ್ರಮೋದ್ ಗೌಡ(20) ಪ್ರಕರಣದ ಮೊದಲ ಆರೋಪಿ. ಈತ ತನ್ನ ಗೆಳೆಯನ ಮೊಬೈಲ್‌ನಲ್ಲಿ ಅಕೌಂಟ್ ಓಪನ್ ಮಾಡಿ, ನಟಿ ರಮ್ಯಾ ಅವರ ಇನ್‌ಸ್ಟಾಗ್ರಾಂ ಖಾತೆಗೆ ಅಶ್ಲೀಲ ಮತ್ತು ಬೆದರಿಕೆ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ.
ಪ್ರಮೋದ್ ಗೌಡ- 87 ಎಂಬ ಅಕೌಂಟ್‌ನಿಂದ ಮೆಸೇಜ್ ಮಾಡಿದ್ದ ಆರೋಪಿಯನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು.
ಈ ಸಂಬಂಧ ಸೈಬರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸದ್ಯ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.