×
Ad

30 ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ನಲ್ಲಿ ಹೆಚ್ಚುವರಿ ಪ್ರವೇಶಾವಕಾಶ: ಸಚಿವ ಶಿವರಾಜ್ ತಂಗಡಗಿ

Update: 2023-12-06 19:52 IST

ಬೆಳಗಾವಿ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಸಂಖ್ಯಾಬಲವನ್ನು ಶೇ.25ರಷ್ಟು ಹೆಚ್ಚಿಸಿ, 30 ಸಾವಿರ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಬಿ.ಪಿ.ಹರೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯಲ್ಲಿ ಒಟ್ಟು 2,443 ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 2,28,411 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶದ ಸೌಲಭ್ಯ ಕಲ್ಪಿಸಲಾಗಿದೆ. ಹರಿಹರ ಕ್ಷೇತ್ರದ 9 ವಿದ್ಯಾರ್ಥಿ ನಿಲಯಗಳಲ್ಲಿ 745 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿ ನಿಲಯಗಳ ಪ್ರವೇಶ ಪ್ರಕ್ರಿಯೆ ಮುಗಿದ ಬಳಿಕ ಜಿಲ್ಲೆಯಲ್ಲಿ ಆಯಾ ತಾಲೂಕಿನ ವಿದ್ಯಾರ್ಥಿ ನಿಲಯಗಳಿಗೆ ತಾತ್ಕಾಲಿಕವಾಗಿ ಸ್ಥಾನಗಳನ್ನು ಆಂತರಿಕ ವರ್ಗಾವಣೆ ಮಾಡಿಕೊಂಡು ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು

ವಿದ್ಯಾರ್ಥಿ ನಿಲಯಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ದೊರಕದ ಅರ್ಹ ಹಿಂದುಳಿದ ವಿದ್ಯಾರ್ಥಿಗಳಿಗೆ ಪರ್ಯಾಯವಾಗಿ ಅನುದಾನದ ಲಭ್ಯತೆಯ ಅನುಸಾರ ‘ವಿದ್ಯಾಸಿರಿ ಯೋಜನೆ’ಯಡಿ ಪ್ರತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1500 ರೂ.ನಂತೆ ಗರಿಷ್ಠ 10 ತಿಂಗಳಿಗೆ 15 ಸಾವಿರ ರೂ.ನಂತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಯು.ಟಿ.ಖಾದರ್, ಭವಿಷ್ಯದ ದೃಷ್ಟಿಯಿಂದ ಹಾಸ್ಟೆಲ್‍ಗಳ ಸಂಖ್ಯೆಯನ್ನು ಹೆಚ್ಚಿಸಿ. ಪ್ರಸ್ತುತ ಸಮಸ್ಯೆಗೆ ಮಾತ್ರವಲ್ಲ. ಭವಿಷ್ಯದ ದೃಷ್ಟಿಯಿಂದ ಸೂಕ್ತ ಯೋಜನೆ ರೂಪಿಸಿ ಎಂದು ಸಲಹೆ ನೀಡಿದರು.

100 ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಪ್ರಸ್ತಾವ: ರಾಜ್ಯದಲ್ಲಿ ಹಾಸ್ಟೆಲ್ ಸಮಸ್ಯೆಗಳಿದ್ದು, ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ಹಲವು ಕಡೆ ಹೆಚ್ಚಿನ ಹಾಸ್ಟೆಲ್ ನಿರ್ಮಾಣ ಮಾಡುವ ಸಂಬಂಧ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ’

-ಶಿವರಾಜ್ ತಂಗಡಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News