ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಬೆಂಗಳೂರು : ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಮಂಗಳವಾರ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರೀ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡಿದ್ದರು.
ಸದ್ಯ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದ್ದು, ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ.
"ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸಲು ಸೂಚಿಸಲಾಗಿದೆ. ಶಸ್ತ್ರಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ನಿಮ್ಮೆಲ್ಲರ ಕಾಳಜಿ ಮತ್ತು ಹಾರೈಕೆಗೆ ಧನ್ಯವಾದಗಳು" ಎಂದು ಅವರ ಪುತ್ರ, ಕರ್ನಾಟಕ ಸರಕಾರದ ಸಚಿವ ಪ್ರಿಯಾಂಕ್ ಖರ್ಗೆ ‘ಎಕ್ಸ್’ ಪೋಸ್ಟ್ ನಲ್ಲಿ ಮಾಹಿತಿ ನೀಡಿದ್ದಾರೆ.
ಗುರುವಾರ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.